ಸುರಪುರ: ನಗರದ ತಹಶೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದಿಂದ ಪ್ರತಿಭಟನೆ ಸುರಪುರ ತಾಲೂಕಿನ ಖಾನಾಪುರ ಎಸ್.ಹೆಚ್ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಮರಿಲಿಂಗಪ್ಪ ಕರ್ನಾಳ ಮೇಲೆ ಹಲ್ಲೆ ನಡೆದು 9 ದಿನಗಳಾದರೂ ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಇದಕ್ಕೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ದೂರಿದರು. ತಾಲೂಕಿನಲ್ಲಿ ಕಳೆದ 2 ವಾರಗಳಲ್ಲಿಯೇ 2 ಗಂಭೀರ ಘಟನೆಗಳು ನಡೆದಿದ್ದು, ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಇದರಿಂದ ತಾಲೂಕಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಜಿಲ್ಲಾಡಳಿತದ ವೈಫಲ್ಯವೇ ಕಾರಣ ಎಂದು ಅವರು ಆರೋಪಿಸಿದರು. ಜಿಲ್ಲಾ ಪಂಚಾಯತ್ ಸದಸ್ಯನ ಮೇಲೆ ಹಲ್ಲೆ ನಡೆಸಿದ ಗೂಂಡಾಗಳನ್ನು ಕೂಡಲೇ ಬಂಧಿಸಬೇಕು. ತಾಲೂಕಿನಲ್ಲಿ ಪೊಲೀಸ್ ಇಲಾಖೆಯನ್ನು ಚುರುಕುಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಉಪ ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಮೂಲಕ ಸಲ್ಲಿಸಿದರು.