ಯಾದಗಿರಿ: ಬಸವಸಾಗರ ಜಲಾಶಯದಿಂದ ಮತ್ತೆ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಜಿಲ್ಲೆಯ ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಇರುವ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2,81,075 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಒಟ್ಟು 33.313 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದ ಜಲಾಶಯದಲ್ಲಿ ಈಗ 26 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಒಳಹರಿವು 2,30,000 ಕ್ಯೂಸೆಕ್ ಹೆಚ್ಚಾಗಿದ್ದು, ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ ಹೆಚ್ಚಿದ ನೀರಿನ ಹರಿವಿನಿಂದ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಯಾದಗಿರಿ ಮತ್ತು ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಹಪುರ ತಾಲೂಕಿನ ಕೊಳ್ಳುರು ಬ್ರಿಡ್ಜ್ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಾಲಾಗಿದೆ. ಕೃಷ್ಣಾ ನದಿ ತೀರದ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದ್ದು, ಕಳೆದ ವರ್ಷವಷ್ಟೇ ಪ್ರವಾಹದಿಂದ ತತ್ತರಿಸಿದ್ದ ಜಿಲ್ಲೆಯ ಜನರಲ್ಲೀಗ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ತುಂಬಿ ಹರಿಯುತ್ತಿರುವುದರಿಂದ ಜಿಲ್ಲೆಯ ಜನರ ಆತಂಕ ಇನ್ನಷ್ಟು ಹೆಚ್ಚಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ನದಿ ತೀರದ ಕಡೆ ಜನ-ಜಾನುವಾರುಗಳು ತೆರಳದಂತೆ ಎಚ್ಚರಿಕೆ ನೀಡಿದೆ.