ಯಾದಗಿರಿ: ಜನವರಿ 30 ರಿಂದ ಫೆಬ್ರವರಿ 13ರವರೆಗೆ ಕುಷ್ಠರೋಗದ ಅರಿವು ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಮಹಾತ್ಮ ಗಾಂಧೀಜಿಯವರ ಸ್ಮರಣೆಯಲ್ಲಿ ನಮ್ಮ ಜಿಲ್ಲೆಯನ್ನು ಕುಷ್ಠರೋಗದಿಂದ ಮುಕ್ತಗೊಳಿಸಲು ಪಣ ತೊಟ್ಟು ಕಾರ್ಯಪ್ರೌವೃತ್ತರಾಗಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠ ವಿಭಾಗ) ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸ್ಪರ್ಶ್ ಕುಷ್ಠ ಅರಿವು ಆಂದೋಲನಕ್ಕೆ ಚಾಲನೆ ನೀಡಿದ ನಂತರ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಅವರು, ಕುಷ್ಠರೋಗಿಗಳಿಗೆ ಸಮಾಜದಲ್ಲಿ ಯಾವುದೇ ರೀತಿಯಾದ ತಾರತಮ್ಯಗಳಾಗದಂತೆ ಎಚ್ಚರವಹಿಸಬೇಕು. ಇತರರಿಂದಲೂ ಶೋಷಣೆಗಳಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಜಿಲ್ಲೆಯಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು “ಕುಷ್ಠರೋಗ ಮುಕ್ತ ಜಿಲ್ಲೆ” ಎಂಬ ಹೆಗ್ಗಳಿಕೆ ತರಲು ನಾವೆಲ್ಲರೂ ಬದ್ಧರಾಗಬೇಕು ಎಂದು ಕರೆ ಕೊಟ್ಟರು.
ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಅವರು ಹಾಸ್ಯದ ಮೂಲಕ ಕುಷ್ಠರೋಗದ ಕುರಿತು ಜಾಗೃತಿ ಮೂಡಿಸಿದರು. ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನಾಚರಣೆ ಅಂಗವಾಗಿ ಮೌನಾಚರಣೆ ಮಾಡಲಾಯಿತು. ಕುಷ್ಠರೋಗದಿಂದ ಗುಣಮುಖ ಹೊಂದಿದ ರಾಯಪ್ಪ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಆಂದೋಲನದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.