ಸುರಪುರ : ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪುರ ಸಭೆ ನಡೆಸಿದರು.
ಸುರಪುರ ಮತ್ತು ಹುಣಸಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಂಡು ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡಿ ಸಮಸ್ಯೆ ಬಾರದಂತೆ ನೋಡಿಕೊಳ್ಳಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಅನುದಾನವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಕೆ ಮಾಡದೆ ಸಮುದಾಯದ ಅಭಿವೃದ್ಧಿಗೆ ಬಳಕೆ ಮಾಡುವಂತೆ ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಆದರೆ ಸರಕಾರಿ ಜಾಗ ಇರುವುದನ್ನು ವರದಿ ನೀಡುವಂತೆ ತಿಳಿಸಿದರು.
ಮಹಿಳ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಯೋಜನಾಧಿಕಾರಿ ಮೀನಾಕ್ಷಿ ಪಾಟೀಲ್ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಇದುವರೆಗೆ ಶೇಕಡ 3ರಷ್ಟು ಅನುದಾನವನ್ನು ವಿಕಲಚೇತನರ ಅಭಿವೃದ್ಧಿಗೆ ಮೀಸಲಿಡಲಾಗುತ್ತಿತ್ತು. ಆದರೆ ಈ ವರ್ಷ ಇನ್ನೂ ಶೇಕಡ 2 ರಷ್ಟು ಅನುದಾನ ಸೇರಿಸಿ ಒಟ್ಟು ಶೇಕಡಾ 5 ರಷ್ಟು ಹಣವನ್ನು ವಿಕಲಚೇತನರ ಅಭಿವೃದ್ಧಿಗೆ ಖರ್ಚು ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಯೋಜನಾಧಿಕಾರಿ ಕುಮುಲಯ್ಯ ವ್ಯವಸ್ಥಾಪಕ ಯಂಕಣ್ಣ ಬಾಗಲಿ ಸೇರಿದಂತೆ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿದ್ದರು.