ಯಾದಗಿರಿ: ಜಿಲ್ಲೆಯ ಶಹಾಪುರ ಮತ್ತು ವಡಗೇರಾ ತಾಲ್ಲೂಕಿನ ನಾಯ್ಕಲ್, ಕುರಕುಂದ ಹಾಗೂ ಇನ್ನಿತರ ಗ್ರಾಮಗಳ ಸುಮಾರು 25ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ 25.000 ರೂ. ಗಳವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿಸಿದರು.
ಬಾಲಕಾರ್ಮಿಕ ಪದ್ಧತಿ 1986ರ ಕಾಯ್ದೆಯಡಿಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಅನಿರೀಕ್ಷಿತ ತಪಾಸಣೆ ವೇಳೆ ಪತ್ತೆಯಾದ ಮಕ್ಕಳ ದಾಖಲೆಗಳನ್ನು ವೀಕ್ಷಿಸಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಸೂಚಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದಲ್ಲಿ ಮಾಲೀಕರಿಗೆ 50,000 ರೂ. ಗಳ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.