ಸುರಪುರ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ತಾಲೂಕು ಘಟಕ) ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಅವರಿಗೆ ಮನವಿ ಸಲ್ಲಿಸಿತು.
ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಸಂಘದ ಕಾರ್ಯಕರ್ತರು, ಕೂಲಿಕಾರರ ಬೇಡಿಕೆಗಳನ್ನು ಈಡೇರಿಸದೆ ಸರ್ಕಾರ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ತಾಲೂಕು ಕಾರ್ಯದರ್ಶಿ ರಾಜು ದೊಡ್ಮನಿ ಮಾತನಾಡಿ, ಕೇಂದ್ರ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಕೂಲಿಕಾರರು ಸಂಕಷ್ಟದಲ್ಲಿದ್ದು, ಪ್ರತಿ ಕುಟುಂಬಕ್ಕೆ ತಲಾ ಒಬ್ಬರಿಗೆ 10 ಕೆಜಿಯಂತೆ ಪಡಿತರ ವಿತರಿಸಬೇಕು. ₹ 7,500 ಪರಿಹಾರ ನೀಡಬೇಕು. ವಿದ್ಯಾವಂತ ನಿರುದ್ಯೋಗಿಗಳಿಗೆ ಮಾಸಿಕ ₹10,000 ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.