ಸುರಪುರ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ಉತ್ತಮ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಸಿಪಿಐಎಂ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸುರಪುರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ, ಸಿಪಿಐಎಂನ ಅನೇಕ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಎಂ ಮುಖಂಡರು, ಕೇಂದ್ರ ಸರ್ಕಾರ ಉತ್ತಮ ಆಡಳಿತ ನೀಡಿದೆ ಎಂದು ಅನೇಕರು ಮಾಧ್ಯಮಗಳ ಚರ್ಚೆಗಳಲ್ಲಿ ಭಾಗವಹಿಸಿ ಮಾತನಾಡುತ್ತಾರೆ. ಆದರೆ ವಾಸ್ತವದಲ್ಲಿ ನರೇಂದ್ರ ಮೋದಿಯವರ ಸರಕಾರ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.
ಕೊರೊನಾ ಕುರಿತು ಸೂಕ್ತ ಮುಂಜಾಗ್ರತೆ ವಹಿಸಿರುವುದಾಗಿ ಹೇಳಲಾಗುತ್ತಿದೆ. ಆದರೆ ದೇಶದಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಜನ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇನ್ನೂ ಸಾವಿರಾರು ಜನ ಅಸುನೀಗಿದ್ದಾರೆ, ಆದರೂ ಕೊರೊನಾಗೆ ಸಂಬಂಧಿಸಿದಂತೆ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ ಎನ್ನುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.
ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿ ನಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.