ಸುರಪುರ: ಸುರಪುರ ತಾಲ್ಲೂಕು ಪಿಂಜಾರ ವಿವಿದೊದ್ದೇಶ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕುಂಜರ ಸಮುದಾಯದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ದರ್ಬಾರ್ ರಸ್ತೆ ಮಾರ್ಗವಾಗಿ ಮಹಾತ್ಮಗಾಂಧಿ ವೃತ್ತದ ಮೂಲಕ ಕಚೇರಿವರೆಗೆ ತಮ್ಮ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಂತರ ತಹಶೀಲ್ದಾರ್ ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರನ್ನುದ್ದೇಶಿಸಿ ಬಂಜಾರ ಸಂಘದ ರಾಜ್ಯಾಧ್ಯಕ್ಷ ಅಬ್ದುಲ್ ರಜಾಕ್ ಮಾತನಾಡಿ ಸರ್ಕಾರ ಪಿಂಜಾರ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದೆ. ಇದರಿಂದಾಗಿ ಸಮುದಾಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸೇರಿದಂತೆ ಎಲ್ಲಾ ರಂಗಗಳಲ್ಲಿ ಹಿಂದುಳಿದಿದೆ ಇದಕ್ಕಾಗಿ ಸರ್ಕಾರ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಶಿರಸ್ತೇದಾರ್ ನಿಸಾರ್ ಅಹಮದ್ ಅವರ ಮೂಲಕ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಆಗಮಿಸಿದ್ದ ನೂರಾರು ಸಂಖ್ಯೆಯ ಪಿಂಜಾರ ಸಮುದಾಯದ ಪ್ರತಿಭಟನಾಕಾರರು ಭಾಗವಹಿಸಿದ್ದರು.