ಸುರಪುರ: ರಾಜ್ಯದಲ್ಲಿ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಸುರಪುರದಲ್ಲಿ ದಲಿತ, ರೈತ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಪ್ರತಿಭಟನಕಾರರು, ಗೋಹತ್ಯೆ ನಿಷೇಧ ಕಾಯ್ದೆಯು ರೈತವಿರೋಧಿಯಾಗಿದೆ. ಇದರಿಂದ ರೈತರು ನಷ್ಟ ಅನುಭವಿಸಲಿದ್ದಾರೆ, ಯಾವುದೇ ಆಹಾರ ಆಯ್ಕೆ ಮಾಡಿಕೊಳ್ಳುವುದು ಅವರ ವೈಯಕ್ತಿಕ ವಿಚಾರ. ಅದನ್ನು ನಿರ್ಬಂಧಿಸುವ ಹಕ್ಕು ಯಾರಿಗೂ ಇಲ್ಲ. ಕೂಡಲೇ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಇದೇ ಜನವರಿ 26 ರಂದು ದೇಶಾದ್ಯಂತ ನಡೆಯಲಿರುವ ರೈತಪರ ಪ್ರತಿಭಟನೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಕರೆ ನೀಡಿದರು. ಬಳಿಕ ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿ ಶಿರಸ್ತೇದಾರ್ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ, ಮುಖಂಡರಾದ ಮಲ್ಲಿಕಾರ್ಜುನ ಕ್ರಾಂತಿ, ಭೀಮರಾಯ ಸಿಂಧಿಗೇರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.