ಸುರಪುರ (ಯಾದಗಿರಿ): ಸುರಪುರ ನಗರದ ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಿ ಶಾಮಲಾರನ್ನು ಉದ್ದೇಶಪೂರ್ವಕವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಹೋರಾಟಗಾರರು ಕ್ಷೇತ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಹೋರಾಟಗಾರ ಯಲ್ಲಪ್ಪ ಚಿನ್ನಾಕಾರ ಮಾತನಾಡಿ, ರಂಗಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕಿ ಶಾಮಲಾ ಎಲ್‌ಕೆಜಿ ತರಗತಿಗಳಿಗೆ ಪಾಠ ಮಾಡುತ್ತಿದ್ದರು. ಅವರನ್ನೇ ಮುಂದುವರೆಸುವಂತೆ ಸರ್ಕಾರದ ಸ್ಪಷ್ಟ ಆದೇಶದ ಸುತ್ತೋಲೆ ಕೂಡ ಇದೆ. ಆದರೂ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರು ಶಾಮಲಾ ಅವರನ್ನು ಕೆಲಸದಿಂದ ತೆಗೆಯಲು ಮುಂದಾಗಿದ್ದಾರೆ. ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರ ಮೇಲೆ ಕ್ರಮ ಕೈಗೊಂಡು ಈ ಮುಂಚೆ ಸೇವೆ ಸಲ್ಲಿಸಿರುವ ಶಿಕ್ಷಕಿಯನ್ನು ಮುಂದುವರೆಸುವಂತೆ ಆಗ್ರಹಿಸಿದರು.
ಹೋರಾಟಗಾರರ ಮನವಿಯನ್ನು ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾಧವರೆಡ್ಡಿಯವರು ಒಂದು ವಾರದೊಳಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ರು.