ಸುರಪುರ/ಯಾದಗಿರಿ: ಉತ್ತರ ಪ್ರದೇಶದ ಹಥ್ರಾಸ್ ಅತ್ಯಾಚಾರ ಘಟನೆ ಖಂಡಿಸಿ ಸುರಪುರ ಬಂದ್ ಆಚರಿಸಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆ ನಡೆಸಲಾಯಿತು.
ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲಿನ ಅತ್ಯಾಚಾರ ವಿರೋಧಿಸಿ ಸಾಮೂಹಿಕ ಸಂಘಟನೆಗಳ ವೇದಿಕೆಯಿಂದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಬೀದರ್ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಸುರಪುರ ನಗರದ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ವೃತ್ತದಿಂದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ, ಹಥ್ರಾಸ್ ಜಿಲ್ಲೆಯಲ್ಲಿ ಯುವತಿಯನ್ನು ಕಾಮುಕರು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದನ್ನು ಉಗ್ರವಾಗಿ ಖಂಡಿಸುತ್ತೇವೆ. ಉತ್ತರ ಪ್ರದೇಶದ ಸರಕಾರ ಈ ಘಟನೆಯನ್ನು ನಿರ್ಲಕ್ಷ್ಯಿಸುತ್ತಿರುವುದು ಅಸಹನೀಯ. ಕೂಡಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು, ಅತ್ಯಾಚಾರಿಗಳನ್ನು ಮರಣದಂಡನೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. ನಂತರ ಗ್ರೇಡ್-2 ತಹಶೀಲ್ದಾರ್ ಸೂಫಿಯಾ ಸುಲ್ತಾನ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಸಲ್ಲಿಸಿದರು.