ಯಾದಗಿರಿ : ಜಿಲ್ಲೆಯ ಸುರಪುರದಲ್ಲಿ ಶಾಸಕ ರಾಜೂಗೌಡ ಅವರ ಜನ್ಮ ದಿನಾಚರಣೆ ಹಿನ್ನೆಲೆ ಹಳ್ಳಿಗಳಿಗೆ ಬಸ್ ಸಂಚಾರ ಸ್ಥಗಿತ ಮಾಡಲಾಗಿದೆ. ಇದರಿಂದಾಗಿ ಊರಿಗೆ ತೆರಳಲು ಸಾಧ್ಯವಾಗದೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಸಾರಿಗೆ ಸಂಸ್ಥೆಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಆದರೆ, ಇದೇ ವೇಳೆ ಸ್ಥಳಕ್ಕೆ ಬಂದ ಡಿವೈಎಸ್‌ಪಿ ತಮ್ಮ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ ವಿದ್ಯಾರ್ಥಿಗಳು, ಅವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.
ಸುರಪುರದ ಬಸ್ ನಿಲ್ದಾಣದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಪ್ರತಿಭಟನೆ ಕೈಬಿಡಿ, ಇಲ್ಲದಿದ್ದರೆ ಕೈ-ಕಾಲು ಮುರಿಯುತ್ತೇನೆಂದು ಡಿವೈಎಸ್ಪಿ ದೇವರಾಜ ಬೆದರಿಕೆ ಹಾಕಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದರು.
ಡಿವೈಎಸ್ಪಿ ಬೆದರಿಕೆ ಹಾಕಿದ ಹಿನ್ನೆಲೆ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಜಮಾವಣೆಗೊಂಡರು. ಡಿವೈಎಸ್ಪಿ ಕ್ಷಮೆ ಕೋರುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದು ಪ್ರತಿಭಟಿಸಿದರು.
ವಿದ್ಯಾರ್ಥಿಗಳ ಬಗ್ಗೆ ಮಾತನಾಡಬೇಕಾದರೆ ನಿಮಗೆ ಕಾಮನ್ ಸೆನ್ಸ್ ಇರಬೇಕು. ನಮಗೆ ಕೈ-ಕಾಲು ಮುರಿಯುತ್ತೇನೆಂದು ಹೇಗೆ ಅಂದಿರಿ ಎಂದು ಡಿವೈಎಸ್ಪಿ ಅವರನ್ನು ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡರು. ನಂತರ ವಿದ್ಯಾರ್ಥಿಗಳ ಮನವೊಲಿಸಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು.