ಯಾದಗಿರಿ: ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಾಳ ಮೊರಾರ್ಜಿ ದೇಸಾಯಿ ಶಾಲೆಯ ಮಕ್ಕಳು ದೋರನಹಳ್ಳಿ ಗ್ರಾಮದ ಬಳಿ ರಾಜ್ಯ ಹೆದ್ದಾರಿ ತಡೆದು ಅಕ್ರೋಶ ವ್ಯಕ್ತಪಡಿಸಿದರು. ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಅಲ್ಲದೇ ಸರಿಯಾದ ಊಟದ ವ್ಯವಸ್ಥೆ ಇಲ್ಲದೆ ಪಿಯುಸಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹೀಗಿದ್ದರೂ ವಾರ್ಡನ್ ಸುಮಂಗಲ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ಆರೋಪಿಸಿದರು. ಇದರಿಂದ ಬೇಸರಗೊಂಡ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲ್ನಡಿಗೆಯಲ್ಲಿ ಜಿಲ್ಲಾ ಕೇಂದ್ರಕ್ಕೆ ಬರಲು ಯತ್ನಿಸಿದ್ದಾರೆ.
ವಿದ್ಯಾರ್ಥಿಗಳನ್ನು ರಸ್ತೆ ಮಧ್ಯದಲ್ಲಿಯೇ ಶಾಲಾ ಸಿಬ್ಬಂದಿ ತಡೆದ ಹಿನ್ನೆಲೆ ಶಹಾಪುರ ತಾಲೂಕಿನ ದೋರನಹಳ್ಳಿ ಬಳಿಯ ಮುಖ್ಯ ರಸ್ತೆಯಲ್ಲಿ ಧರಣಿ ಕೂರುವ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ ತಮ್ಮ ಸಮಸ್ಯೆಗಳನ್ನು ಆಲಿಸುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟುಹಿಡಿದಿದ್ದಾರೆ.