ಸುರಪುರ (ಯಾದಗಿರಿ): ತಾಲೂಕಿನ ಅನೇಕ ಗ್ರಾಮಗಳಲ್ಲಿ ದಲಿತರ ಮೇಲೆ ಹಲ್ಲೆ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಮತ್ತು ಹಲ್ಲೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕೋವಿಡ್ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಕಾನೂನು ಪಾಲನೆಗಾಗಿ ಅಮರಣಾಂತ ಸತ್ಯಾಗ್ರಹ ಕೈಬಿಟ್ಟು ಸಾಂಕೇತಿಕವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಲಾಗುತ್ತಿದೆ ಎಂದು ಹೋರಾಟದ ನೇತೃತ್ವ ವಹಿಸಿದ್ದ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ್ ಕ್ರಾಂತಿ ತಿಳಿಸಿದರು.
ಹೋರಾಟಗಾರರ ಮನವಿ ಸ್ವೀಕರಿಸಿದ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಂ ಪಾಟೀಲ್ ಮಾತನಾಡಿ, ತಮ್ಮ ಬೇಡಿಕೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಜೂನ್ 31ರವರೆಗೆ ಲಾಕ್ಡೌನ್ ಇರುವುದರಿಂದ ಈ ದಿನಗಳಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.