ಯಾದಗಿರಿ : ಲಾಕ್ಡೌನ್ ಸಡಿಲಿಕೆಯಾಗಿದ್ದರಿಂದ ಬೇರೆ ಬೇರೆ ರಾಜ್ಯಗಳಿಂದ ಜನರು ಜಿಲ್ಲೆಗೆ ಮರಳಿ ಬರುತ್ತಿದ್ದಾರೆ. ಇದರಿಂದ ಯಾದಗಿರಿ ಜಿಲ್ಲೆಯಲ್ಲಿ ಎರಡು ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿವೆ. ಹಾಗಾಗಿ ಜನತೆ ಜಾಗರೂಕರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲೇಬೇಕು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಸುರಪುರ ತಾಲೂಕಿನ ಇಬ್ಬರಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿವೆ. ಇವರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಈ ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ಹೊರ ರಾಜ್ಯಗಳಿಂದ ಆಗಮಿಸುತ್ತಿರುವ ವಲಸೆಗಾರರು ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ಗೆ ಒಳಪಡಬೇಕಾಗುತ್ತದೆ. ಯಾರಾದರೂ ಬೇರೆ ರಾಜ್ಯಗಳಿಂದ ವಲಸೆ ಬಂದಿರುವುದು ಕಂಡು ಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಯಾರೂ ಸ್ವಗ್ರಾಮಕ್ಕೆ ಹೋಗಬಾರದು. ಒಂದು ವೇಳೆ ಅಂತವರು ಯಾರಾದರೂ ಕಂಡು ಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಚಿವರು ಕೋರಿದ್ದಾರೆ.
ಎಲ್ಲರೂ ಸರ್ಕಾರದ ಆದೇಶ ಪಾಲಿಸುವುದರ ಜೊತೆ ತಮ್ಮ ತಮ್ಮ ಮನೆಯಲ್ಲಿಯೇ ಇರಬೇಕು. ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಬಾರದು. ಪ್ರತಿಯೊಂದು ಚೆಕ್ ಪೋಸ್ಟ್ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಒಳಗಾಗಬೇಕು. ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳೂ ಸಹ ಉತ್ತಮ ರೀತಿಯಿಂದ ಸಹಕಾರ ನೀಡುತ್ತಿದ್ದಾರೆ. ಜನರ ಸಹಕಾರವೂ ಮುಖ್ಯ. ಕೊರೊನಾ ಮುಕ್ತ ಜಿಲ್ಲೆಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.