ಯಾದಗರಿ: ಕೇಂದ್ರ ಸರ್ಕಾರ ರೈತರ ವಿರೋಧಿ ನೀತಿ ಅನುಸರಿಸಿ ಕೃಷಿ ಕಾಯ್ದೆ ಜಾರಿಗೆ ತಂದಿದ್ದು, ಇದು ದೇಶದ ಅನ್ನದಾತರಿಗೆ ಮಾರಕವಾಗಿದೆ. ಈಗಾಗಲೇ ದೇಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಷ್ಟಾದ್ರು ಪ್ರಧಾನಮಂತ್ರಿಯವರು ರೈತರ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಮಾರಕವಾದ ಕೃಷಿ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ಇದೇ 22ರಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಹಲವು ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ವಿಧಾನಸೌಧ ಚಲೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಕರೆ ನೀಡಿದರು. ಮಾರಕ ಕೃಷಿ ಕಾಯ್ದೆ ರದ್ದು ಮಾಡುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ಕೈಬಿಡಲ್ಲ ಎಂದು ಚಾಮರಸ ಮಾಲಿಪಾಟೀಲ ಎಚ್ಚರಿಸಿದರು.