ಯಾದಗಿರಿ: ಜೂನ್ 25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಜಿಲ್ಲೆಯ ಎಲ್ಲಾ ಕೇಂದ್ರಗಳನ್ನು ಸೋಡಿಯಂ ಹೈಪೋಕ್ಲೋರೈಡ್ ಬಳಸಿ ಸ್ಯಾನಿಟೈಸ್ ಮಾಡಲಾಗಿದೆ ಎಂದು ಡಿಸಿ ಎಂ. ಕೂರ್ಮಾ ರಾವ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಮತ್ತು ಅವರ ಸಂಬಂಧಿಕರೊಂದಿಗೆ ಹಮ್ಮಿಕೊಂಡಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಭಯ, ಆತಂಕಕ್ಕೆ ಒಳಗಾಗದೆ ನಿರಾತಂಕವಾಗಿ ಪರೀಕ್ಷೆ ಬರೆಯುವಂತೆ ಸಲಹೆ ನೀಡಿದರು.
ಜಿಲ್ಲೆಯ ಕಂಟೇನ್ಮೆಂಟ್ ಝೋನ್ ವಿದ್ಯಾರ್ಥಿಗಳು ಕೂಡ ತಮ್ಮ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. ಸಾಮಾನ್ಯ ಜ್ವರ, ಕೆಮ್ಮು ಹಾಗೂ ಇನ್ನಿತರ ರೋಗ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಪ್ರತಿ ಕೇಂದ್ರದಲ್ಲಿ 2 ಹೆಚ್ಚುವರಿ ಕೋಣೆಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಆಯಾ ಕೇಂದ್ರಗಳಲ್ಲಿ ಮಾಸ್ಕ್, ಸಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗುವುದು. ಆರೋಗ್ಯ ಸಿಬ್ಬಂದಿ ಕೂಡ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುತ್ತಾರೆ ಎಂದರು.
ಪೋಷಕರು ಆತಂಕ ಪಡುವ ಬದಲು ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕಾ ಕ್ರಮಗಳ ಮಾಹಿತಿ ನೀಡಿ ಪರೀಕ್ಷೆಗೆ ಕಳುಹಿವಂತೆ ತಿಳಿಸಿದರು. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದ ಒಂದು ಕೊಠಡಿಯಲ್ಲಿ 15-20 ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗಾಗಿ ಅನುಕೂಲಕರ ಸ್ಥಳಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ವೈಯಕ್ತಿಕ ವಾಹನದಲ್ಲೂ ಕೂಡ ಬರಬಹುದು. ಯಾರೇ ಆಗಲಿ ಕೋವಿಡ್-19 ಸಂಬಂಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಕಡ್ಡಾಯ. ಇನ್ನೂ ಹಾಲ್ ಟಿಕೆಟ್ ಪಡೆಯದ ವಿದ್ಯಾರ್ಥಿಗಳು ತಮ್ಮ ಶಾಲೆಯ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಬಹುದು ಎಂದು ಸೂಚಿಸಿದರು.
ನಕಲು ತಡೆಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ದಂಡ ಪ್ರಕ್ರಿಯೆ ಸಂಹಿತೆ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
25ಕ್ಕೂ ಹೆಚ್ಚು ಕರೆ ಸ್ವೀಕಾರ: ನೇರ ಪೋನ್-ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಕೆಂಭಾವಿ, ಕಂದಕೂರ, ಬಂಡೋಳಿ, ಗುರುಮಠಕಲ್, ಅಲ್ಲಿಪೂರ, ರಾಜನಕೋಳೂರು, ಭೀಮರಾಯನಗುಡಿ, ಕುಂಬಾರಪೇಟೆ, ಬದ್ದೇಪಲ್ಲಿ, ಬೆಂಚಿಗಡ್ಡಿ, ಅರಿಕೇರಾ ಕೆ., ಬೆಂಡೆಬೆಂಬಳಿ, ಯಾದಗಿರಿ, ಶಹಾಪುರ, ಸುರಪುರ, ನಾರಾಯಣಪುರ ಸೇರಿದಂತೆ 25ಕ್ಕೂ ಹೆಚ್ಚು ನಗರ/ ಗ್ರಾಮಗಳಿಂದ ಕರೆಗಳು ಸ್ವೀಕೃತವಾದವು.
ಎಲ್ಲಾ ಕರೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಕೋವಿಡ್-19 ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿದ್ದ ಆತಂಕ, ಗೊಂದಲ, ಸಂಶಯಗಳನ್ನು ನಿವಾರಿಸಿದರು.
ಪರೀಕ್ಷೆಗೆ 17,396 ವಿದ್ಯಾರ್ಥಿಗಳ ನೋಂದಣಿ: ಜಿಲ್ಲೆಯಲ್ಲಿ 59 ಪರೀಕ್ಷಾ ಕೇಂದ್ರಗಳಿದ್ದು, ಬೇರೆ ಜಿಲ್ಲೆಗಳಲ್ಲಿ ಓದುತ್ತಿರುವ ಜಿಲ್ಲೆಯ 456 ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅದೇ ರೀತಿ ಜಿಲ್ಲೆಯಿಂದ 274 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 17,396 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮುಖ್ಯ ಶಿಕ್ಷಕರು ಈಗಾಗಲೇ ಹಾಲ್ ಟಿಕೆಟ್ ಡೌನ್‍ಲೋಡ್ ಮಾಡಿಕೊಂಡಿದ್ದು, ವಿದ್ಯಾರ್ಥಿಗಳಿಗೆ ವಿತರಣೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ರೆಡ್ಡಿ ಅವರು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್. ಪಾಟೀಲ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀಹರಿಬಾಬು, ವಿಭಾಗೀಯ ಸಂಚಾಲನಾ ಅಧಿಕಾರಿ ರಮೇಶ್ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಹಿಳ್ಳಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.