ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: 150 ಸೀಟ್ ಪಕ್ಕಾ ಎಂದ ಮಲ್ಲಿಕಾರ್ಜುನ್ ಖರ್ಗೆ!
🎬 Watch Now: Feature Video
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಲೇ ಇವೆ. ಇಂದು ಬೆಳಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದರೆ, ಇತ್ತೀಚೆಗಷ್ಟೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ನಿಂದ ಅಥಣಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಮೊನ್ನೆಯಷ್ಟೇ ಈ ಇಬ್ಬರು ನಾಯಕರ ರಾಜಕೀಯ ನಡೆಗೆ ಮಾಜಿ ಸಿಎಂ ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿಯಲ್ಲಿ ಎಲ್ಲ ಅಧಿಕಾರ ಅನುಭವಿಸಿ ಇದೀಗ ಕಾಂಗ್ರೆಸ್ ಸೇರುತ್ತಿರುವುದು ಪಕ್ಷಕ್ಕೆ ದ್ರೋಹ ಮಾಡಿದಂತೆ ಎಂದು ಗುಡುಗಿದ್ದರು.
ಇತ್ತೀಚೆಗಷ್ಟೇ ಅಥಣಿ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುವ ಮೂಲಕ ಅಥಣಿಯಿಂದ ಕೈ ಹುರಿಯಾಳಾಗಿ ಆಯ್ಕೆ ಆಗಿದ್ರು. ಸವದಿ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕೂಡ ಬಿಜೆಪಿ ತೊರೆಯಲು ಸನ್ನದ್ಧರಾಗಿದ್ದರು. ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಬೇಕು ಎಂದು ಪಕ್ಷದ ಹೈಕಮಾಂಡ್ ಹಲವು ಬಗೆಯ ಕಸರತ್ತು ನಡೆಸಿತು. ಯಾವುದಕ್ಕೂ ಬಗ್ಗದ ಶೆಟ್ಟರ್ ಪಟ್ಟನ್ನು ಬಿಡದೇ ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಯೇ ಬಿಟ್ಟಿದ್ದರು.
ಭಾನುವಾರ ರಾತ್ರಿ ಕಾಂಗ್ರೆಸ್ ನಾಯಕರು ನಡೆಸಿದ ಮಾತುಕತೆ ಫಲಪ್ರದವಾದ ಬೆನ್ನಲ್ಲೇ ಸೋಮವಾರ ಬೆಳಗ್ಗೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಬಿ ಫಾರ್ಮ್ ಕೂಡ ಪಡೆದು ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರು ತುರ್ತು ಮಾಧ್ಯಮಗೋಷ್ಠಿ ನಡೆಸಿ ಗರಂ ಆಗಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶೆಟ್ಟರ್ ಸೇರ್ಪಡೆಗೆ ಖುಷಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ನೋಡಿ: ಜಗದೀಶ್ ಶೆಟ್ಟರ್ ತಬ್ಬಿಕೊಂಡು ಕಣ್ಣೀರು ಸುರಿಸಿದ ಪತ್ನಿ- ವಿಡಿಯೋ