ಕೊಪ್ಪಳದಲ್ಲಿ ಮಳೆಯಿಂದ ಅಂದಾಜು 10 ಕೋಟಿ ರೂ. ಹಾನಿ
🎬 Watch Now: Feature Video
ಕೊಪ್ಪಳ: ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೋಟ್ಯಂತರ ರೂಪಾಯಿ ಹಾನಿಯಾಗಿದೆ. ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ 10 ಕೋಟಿ ರೂ. ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ವಾಡಿಕೆ ಮಳೆ 60 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದರೆ 82 ಮಿಲಿಮೀಟರ್ ಮಳೆ ಸುರಿದಿದೆ. ಈವರೆಗೆ ಜಿಲ್ಲೆಯಲ್ಲಿ ವಾಡಿಕೆ ಮಳೆ 525 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದರೆ ವಾಡಿಕೆಗಿಂತ ಶೇ. 40 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಅಂದರೆ ಒಟ್ಟು 736 ಮಿಲಿಮೀಟರ್ ಮಳೆಯಾಗಿದೆ. ಕಳೆದೆರಡು ದಿನದಲ್ಲಿನ ವರುಣನ ಅಬ್ಬರಕ್ಕೆ ಜಿಲ್ಲೆಯಾದ್ಯಂತ 140 ಕಚ್ಚಾ ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇನ್ನು 140 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆಗಳು, 830 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕೆ ಬೆಳೆಗಳು ಮಳೆಯಿಂದ ಹಾನಿಯಾಗಿವೆ. ಹಾನಿ ಕುರಿತು ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸುಮಾರು 4.5 ಕೋಟಿ ರೂಪಾಯಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ ಎಂದು ಅಂದಾಜಿಸಿದ್ದಾರೆ.