ಮಥುರಾ: ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಜೀವ ದಹನಗೊಂಡ ಘಟನೆ ಮಥುರಾ ಜಿಲ್ಲೆಯ ಮಹಾವನ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಮೃತರೆಲ್ಲರು ಕಾರಿನಲ್ಲಿದ್ದವರೆಂದು ತಿಳಿದು ಬಂದಿದೆ.
ಸೋಮವಾರ ಬೆಳಗ್ಗೆ ಬಸ್ ಮತ್ತು ಕಾರು ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು. ಮುಂದೆ ತೆರಳುತ್ತಿದ್ದ ಬಸ್ನ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ, ಹಿಂದಿನಿಂದ ಬಂದ ಕಾರು ಕೂಡ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಹೇಗೋ ಕಿಟಕಿಯಿಂದ ಹೊರಗೆ ಬಂದು ಪ್ರಾಣ ಉಳಿಸಿಕೊಂಡರೆ, ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು, ಬೆಂಕಿಯನ್ನು ನಿಯಂತ್ರಿಸಲು ಸುಮಾರು ಒಂದು ಗಂಟೆಗಳ ಕಾಲ ಹರಸಾಹಪಟ್ಟರು. ಆದರೆ, ಅವರು ಬರುವಷ್ಟರಲ್ಲೇ ಬೆಂಕಿಯ ಜ್ವಾಲೆ ಎರಡೂ ವಾಹನಗಳನ್ನು ಸುತ್ತುವರೆದಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಪ್ರಯಾಣಿಕರು ಕಿಟಕಿ ಮೂಲಕ ಪ್ರಾಣಾಪಾಯದಿಂದ ಪಾರಾದರೆ, ಕಾರಿನಲ್ಲಿದ್ದವರು ಹೊರಬರಲು ಸಾಧ್ಯವಾಗದೇ ಅಲ್ಲಿಯೇ ಜೀವ ಕಳೆದುಕೊಂಡಿದ್ದಾರೆ. ಅಪಘಾತದಿಂದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಈ ಭೀಕರ ರಸ್ತೆ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸುವಂತೆ ಸೂಚನೆ ಕೂಡ ನೀಡಿದ್ದಾರೆ.
ಇದನ್ನೂ ಓದಿ: ನಸುಕಿನ ಜಾವದಲ್ಲಿ ಭೀಕರ ರಸ್ತೆ ಅಪಘಾತ: ಬಸ್ - ಟ್ರಕ್ ಮಧ್ಯೆ ಡಿಕ್ಕಿ, ಏಳು ಜನರ ಸಾವು