ಪುಣೆ(ಮಹಾರಾಷ್ಟ್ರ): ರಾಜ್ಯ ಚುನಾವಣೆಯಲ್ಲಿ ಇವಿಎಂಗಳ ದುರ್ಬಳಕೆ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿರಿಯ ಸಾಮಾಜಿಕ ಕಾರ್ಯಕರ್ತ ಬಾಬಾ ಅಧವ್ ಅವರನ್ನು ಶರದ್ ಪವಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬಳಿಕ ಮಾತನಾಡಿದ ಎನ್ಸಿಪಿ (ಎಸ್ಪಿ) ವರಿಷ್ಠ ಶರದ್ ಪವಾರ್, ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ನಾಗರಿಕರಲ್ಲಿ ಆತಂಕ ಮನೆ ಮಾಡಿದೆ. ಹಿಂದೆಂದೂ ಕಂಡರಿಯದ ರೀತಿಯಲ್ಲಿ ಅಧಿಕಾರದ ದುರುಪಯೋಗ ಮತ್ತು ಹಣದ ಹೊಳೆ ಈ ವಿಧಾನಸಭೆ ಚುನಾವಣೆಯಲ್ಲಿ ಹರಿದಿದೆ. ಆಡಳಿತ ನಡೆಸುತ್ತಿರುವವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ಕಾರಣದಿಂದಾಗಿ ನಾವು ಜನರನ್ನು ಜಾಗೃತಗೊಳಿಸಬೇಕಾಗಿದೆ ಎಂದರು.
ಕೆಲವರು ಇವಿಎಂ ಟ್ಯಾಂಪರಿಂಗ್ ಮಾಡಲು ಸಾಧ್ಯ ಎಂದು ನಮಗೆ ತೋರಿಸಿದ್ದರು. ಆದರೆ ನಾವು ಅವರನ್ನು ನಂಬಲಿಲ್ಲ. ಈಗ ಈ ವಿಷಯದಲ್ಲಿ ಸತ್ಯವಿದೆ ಎಂದು ತೋರುತ್ತಿದೆ. ಚುನಾವಣಾ ಆಯೋಗ ತಪ್ಪು ನಿಲುವನ್ನು ತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸಿರಲಿಲ್ಲ. ಆಡಳಿತಗಾರರು ಸರ್ಕಾರದ ಹಣವನ್ನು ಲೂಟಿ ಮಾಡುತ್ತಿದ್ದಾರೆ. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಹಣ , ಇವಿಎಂ ದುರ್ಬಳಕೆ ಹಾಗೂ ಅದಾನಿ ವಿಚಾರ ಸಂಬಂಧ ಹಿರಿಯ ಸಾಮಾಜಿಕ ಕಾರ್ಯಕರ್ತ ಬಾಬಾ ಅಧವ್ ಪುಣೆಯಲ್ಲಿ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಹೇಳಿದರು.
ಹಿರಿಯ ಸಾಮಾಜಿಕ ಕಾರ್ಯಕರ್ತ ಬಾಬಾ ಅಧವ್ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿರುವುದನ್ನು ನಾವು ನೋಡಿದ್ದೇವೆ. ಇಂದು ದೇಶದಲ್ಲಿ ಪ್ರಜಾಪ್ರಭುತ್ವದ ಬಟ್ಟೆಯನ್ನು ಕಳಚಲಾಗುತ್ತಿದೆ. ಹೀಗಾಗಿ ನಾನು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇನೆ. ನಾವೂ ಒಂದು ಹೆಜ್ಜೆ ಮುಂದೆ ಹೋಗಿ ಸರ್ಕಾರದ ವಿರುದ್ಧ ಸತ್ಯಾಗ್ರಹ ಮಾಡುತ್ತೇವೆ. ಅದಾನಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್ ಮುಖಂಡ ಭಾಯ್ ಜಗತಾಪ್ ಹೇಳಿಕೆ