ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಇಲ್ಲಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 16 ಅಭ್ಯರ್ಥಿಗಳ ಪರಿಷ್ಕೃತ ಪಟ್ಟಿಯನ್ನು ಇಂದು ಪ್ರಕಟಿಸಿತು. ಇದು ಪಕ್ಷದ ಕಾರ್ಯಕರ್ತರಲ್ಲಿ ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
ಈ ಹಿಂದೆ, ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕಾರಣಾಂತರಗಳಿಂದ ಹಿಂತೆಗೆದುಕೊಳ್ಳಲಾಯಿತು. ಈಗ ಮತ್ತೆ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಜಮ್ಮುವಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿಂದು ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಜಮ್ಮುವಿನ ಪಕ್ಷದ ಕಚೇರಿಯ ಹೊರಗೆ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಹಿರಿಯರು ಮತ್ತು ಅರ್ಹರಿಗೆ ಟಿಕೆಟ್ ನೀಡಿಲ್ಲ ಎಂದು ಆರೋಪಿಸಿದರು.
Names of BJP Leaders who will campaign for BJP Candidates for General Elections to the Legislative Assembly in JAMMU & KASHMIR (PHASE-I) pic.twitter.com/UWlfPZ32SP
— BJP Jammu & Kashmir (@BJP4JnK) August 26, 2024
ಬಿಜೆಪಿ ನಾಯಕರೊಬ್ಬರು ಮಾತನಾಡಿ, ‘‘ನನಗೆ ಅನ್ಯಾಯವಾಗಿದೆ. ಈ ನಿರ್ಧಾರವನ್ನು ಹಿಂತೆಗೆದುಕೊಳ್ಳದಿದ್ದರೆ ಅದರ ಪರಿಣಾಮವನ್ನು ಬಿಜೆಪಿ ಎದುರಿಸಬೇಕಾಗುತ್ತದೆ. ನಾವು ಪಕ್ಷದಲ್ಲಿದ್ದುಕೊಂಡೆ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ" ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಮಾತನಾಡಿ, ಕಾರ್ಯಕರ್ತರು ಪ್ರತಿಭಟನೆಗೆ ಇಳಿಯಬಾರದು. ಏನೇ ಸಮಸ್ಯೆಗಳಿದ್ದಲ್ಲಿ ಒಬ್ಬೊಬ್ಬರಾಗಿ ಭೇಟಿ ಮಾಡಿ, ಶೀಘ್ರದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇದಕ್ಕೂ ಮೊದಲು ಬಿಜೆಪಿ, 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬೆಳಗ್ಗೆ ಘೋಷಿಸಿತ್ತು. ನಂತರ ಪಟ್ಟಿಯನ್ನು ಹಿಂತೆಗೆದುಕೊಂಡಿತ್ತು. ಸದ್ಯ 16 ಅಭ್ಯರ್ಥಿಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 19, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಮತಗಳ ಎಣಿಕೆ ನಡೆಯಲಿದೆ. ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ.
ಇದನ್ನೂ ಓದಿ: ಜಮ್ಮು & ಕಾಶ್ಮೀರ ಚುನಾವಣೆ: 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಹಿಂಪಡೆದ ಬಿಜೆಪಿ - J and K polls