ನವದೆಹಲಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಪಕ್ಷದ ದೆಹಲಿಯ ಕೇಂದ್ರ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಕೇಂದ್ರ ಚುನಾವಣಾ ಸಮಿತಿ ಸಭೆ (ಸಿಇಸಿ) ನಡೆಯಿತು. ಸಭೆಯಲ್ಲಿ ಸುಮಾರು 17 ರಾಜ್ಯಗಳ 155ಕ್ಕೂ ಹೆಚ್ಚು ಸ್ಥಾನಗಳ ಕುರಿತು ಚರ್ಚೆ ನಡೆಸಲಾಗಿದೆ. ಇನ್ನೆರಡು ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಉಸ್ತುವಾರಿಗಳು, ಸಹ ಉಸ್ತುವಾರಿಗಳು ಮತ್ತು ವಿವಿಧ ರಾಜ್ಯಗಳ ಚುನಾವಣಾ ಉಸ್ತುವಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಒಟ್ಟು 543 ಸೀಟ್ಗಳಲ್ಲಿ '400 ದಾಟಬೇಕು' ಎಂದು ಪ್ರಧಾನಿ ಮೋದಿ ಈಗಾಗಲೇ ಘೋಷಣೆ ಹೊರಡಿಸಿದ್ದಾರೆ. ಸ್ವಂತ ಬಲದಿಂದ 370ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಅತ್ಯುತ್ತಮ ಅಭ್ಯರ್ಥಿಗಳನ್ನೇ ಆಯ್ಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.
ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ಅಸ್ಸಾಂ, ಉತ್ತರಾಖಂಡ ಮತ್ತು ಗೋವಾದ ಮುಖ್ಯಮಂತ್ರಿಗಳು, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ನಾಯಕ ಪ್ರಹ್ಲಾದ್ ಪಟೇಲ್ ಮತ್ತು ಬಿಜೆಪಿಯ ರಾಜ್ಯಾಧ್ಯಕ್ಷ ವಿಡಿ ಶರ್ಮಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಮಧ್ಯಪ್ರದೇಶದ ಎಲ್ಲಾ 29 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ತೆಲಂಗಾಣದ 4- 5 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಹಾಲಿ ಸಂಸದರಾದ ಜಿ.ಕಿಶನ್ ರೆಡ್ಡಿ, ಬಂಡಿ ಸಂಜಯ್ ಕುಮಾರ್, ಅರವಿಂದ್ ಧರ್ಮಪುರಿ ಅವರಿಗೆ ಮತ್ತೆ ಸಿಕೆಟ್ ಸಿಗುವ ಸಾಧ್ಯತೆ ಇದೆ. ಸಭೆಯಲ್ಲಿ ಅಸ್ಸಾಂನ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಾಗಿದೆ. ಈಗಾಗಲೇ ಅಸ್ಸಾಂನ ಬಹುತೇಕ ಲೋಕಸಭಾ ಸ್ಥಾನಗಳನ್ನು ಬಿಜೆಪಿ ನಾಯಕರೇ ತುಂಬಿದ್ದಾರೆ. ಇಲ್ಲಿ 11 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಹಾಗೂ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ದಿಬ್ರುಗಢದಿಂದ ಸ್ಪರ್ಧಿಸಬಹುದು ಹಾಗೂ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅವರನ್ನು ರಾಜ್ಯಸಭೆಗೆ ಕಳುಹಿಸಬಹುದು ಎಂದು ಹೇಳಲಾಗುತ್ತಿದೆ.
ಮುಂದಿನ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಹೆಚ್ಚು ಮಹತ್ವ ಪಡೆದಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಛತ್ತೀಸ್ಗಢ, ರಾಜಸ್ಥಾನ, ಕೇರಳ, ಗುಜರಾತ್, ಜಾರ್ಖಂಡ್ ಹಾಗೂ ಉತ್ತರಾಖಂಡದ ಬಿಜೆಪಿ ನಾಯಕರ ಜೊತೆಗೆ ಚರ್ಚೆ ನಡೆಸಲಾಗಿದೆ.
ಸಭೆಯಲ್ಲಿ ಜಮ್ಮುವಿನ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಬಗ್ಗೆಯೂ ಚರ್ಚಿಸಲಾಗಿದ್ದು, ಮುಂದಿನ ಸಭೆಯಲ್ಲಿ ಕಾಶ್ಮೀರದ ಬಗ್ಗೆ ಚರ್ಚೆ ನಡೆಯಲಿದೆ. ದೆಹಲಿಯ ಎರಡರಿಂದ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಬಗ್ಗೆ ಚರ್ಚೆಗಳು ನಡೆದಿವೆ. ಗೋವಾದಲ್ಲಿ ಒಂದು ಸ್ಥಾನಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಒಂದು ಸ್ಥಾನಕ್ಕೆ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಮುಂದೆ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲ್ಲ, ಜನ ಬಯಸಿದರೆ ರಾಜಕೀಯದಿಂದ ನಿವೃತ್ತಿಗೆ ಸಿದ್ಧ: ಕಮಲ್ನಾಥ್