ನವದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ 'ಇಂಡಿಯಾ' ಮೈತ್ರಿಕೂಟ ಹಮ್ಮಿಕೊಂಡಿದ್ದ 'ಸಂವಿಧಾನ ಉಳಿಸಿ' ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ "ಮ್ಯಾಚ್ ಫಿಕ್ಸಿಂಗ್" ಹೇಳಿಕೆಯ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ನಿಯೋಗ ಸೋಮವಾರ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸೇರಿದಂತೆ ಹಲವರು ನಿಯೋಗದಲ್ಲಿದ್ದರು.
ಚು.ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪುರಿ, "ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗಳು ಅತ್ಯಂತ ಆಕ್ಷೇಪಾರ್ಹ. ಅವರ ಈ ಹೇಳಿಕೆಗಳು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸದೇ ಇರಬಹುದು. ಆದರೆ, ಗಂಭೀರ ಪರಿಣಾಮಗಳನ್ನು ಬೀರಬಹುದು. ಹಾಗಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ" ಎಂದರು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಮೈತ್ರಿಕೂಟದ ನಾಯಕರು ದೆಹಲಿಯಲ್ಲಿ 'ಪ್ರಜಾಪ್ರಭುತ್ವ ಉಳಿಸಿ' ರ್‍ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್, "ಇವಿಎಂಗಳು, ಮ್ಯಾಚ್ ಫಿಕ್ಸಿಂಗ್, ಸಾಮಾಜಿಕ ಮಾಧ್ಯಮಗಳು ಮತ್ತು ಪತ್ರಿಕಾ ಸಹಕಾರವಿಲ್ಲದೆ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 180ಕ್ಕಿಂತ ಹೆಚ್ಚು ಸ್ಥಾನಗಳನ್ನೂ ಗೆಲ್ಲಲು ಸಾಧ್ಯವಿಲ್ಲ. ಪ್ರಧಾನಿ ಮೋದಿ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ತನ್ನ ಪ್ರಯತ್ನಗಳಲ್ಲಿ ಯಶಸ್ವಿಯಾದರೆ ದೇಶದ ಸಂವಿಧಾನವನ್ನು ಬದಲಾಯಿಸಲಾಗುತ್ತದೆ ಮತ್ತು ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತದೆ" ಎಂದು ಹೇಳಿದ್ದರು.
"ಪ್ರಸ್ತುತ ಐಪಿಎಲ್ ಪಂದ್ಯಗಳು ನಡೆಯುತ್ತಿವೆ. ಅಂಪೈರ್‌ಗಳಿಗೆ ಒತ್ತಡ ಹೇರಿದಾಗ ಆಟಗಾರರನ್ನು ಖರೀದಿಸಿದಾಗ ಮತ್ತು ನಾಯಕರನ್ನು ಪಂದ್ಯಗಳನ್ನು ಗೆಲ್ಲಿಸಲು ಬೆದರಿಕೆ ಹಾಕಿದಾಗ ಅದನ್ನು ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ಎಂದು ಕರೆಯಲಾಗುತ್ತದೆ. ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ ಅಂಪೈರ್‌ಗಳನ್ನು ಆಯ್ಕೆ ಮಾಡಿದ್ದು, ಪಂದ್ಯಕ್ಕೂ ಮುನ್ನವೇ ನಮ್ಮ ತಂಡದ ಆಟಗಾರರನ್ನು ಬಂಧಿಸಲಾಗಿತ್ತು. ಈ ಅಂಪೈರ್‌ಗಳನ್ನು ಆಯ್ಕೆ ಮಾಡಿದವರು ಯಾರು?, ಪಂದ್ಯ ಆರಂಭವಾಗುವ ಮುನ್ನವೇ ಇಬ್ಬರು ಆಟಗಾರರನ್ನು ಬಂಧಿಸಲಾಗಿದೆ" ಎಂದು ರಾಹುಲ್ ವಾಗ್ದಾಳಿ ನಡೆಸಿದ್ದರು.