ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಎಐಸಿಸಿ ಇಂದು ಟಿಕೆಟ್ ಘೋಷಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಪ್ರಿಯಾಂಕಾ ಚುನಾವಣಾ ಅಖಾಡಕ್ಕಿಳಿಯುತ್ತಿದ್ದಾರೆ.
ಇಂದು ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಯ ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್, ಕೇರಳ ಉಪಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿತು. ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯಾಗಿ ಪ್ರಿಯಾಂಕಾ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಪಲಕ್ಕಾಡ್ನಿಂದ ರಾಹುಲ್ ಮಮ್ಕೊಟಥಿಲ್ ಮತ್ತು ಚೆಲಕ್ಕರ್‌ನಿಂದ ರಮ್ಯಾ ಹರಿದಾಸ್ ಅವರಿಗೆ ಅವಕಾಶ ನೀಡಲಾಗಿದೆ.
Congress President Shri @kharge has approved the proposal to nominate the following members as party candidates for the bye-elections to the Lok Sabha and Legislative Assembly from Kerala pic.twitter.com/QBFskzozEB
— Congress (@INCIndia) October 15, 2024
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಯ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಲಗತ್ತಿಸಿದ್ದಾರೆ.
ನವೆಂಬರ್ 13ರಂದು ಮತದಾನ: ವಯನಾಡ್ ಲೋಕಸಭಾ ಕ್ಷೇತ್ರ ಸೇರಿ ಕೇರಳದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನ.23ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಕಡೆಯ ದಿನ ಅಕ್ಟೋಬರ್ 25. ನಾಮಪತ್ರ ಹಿಂಪಡೆಯಲು ಕೊನೆಯ ದಿನ ಅಕ್ಟೋಬರ್ 30.
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ಕ್ಷೇತ್ರ: 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಗೆದ್ದಿದ್ದರು. ನಂತರದಲ್ಲಿ, ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡ ಅವರು ವಯನಾಡ್ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಇದನ್ನೂ ಓದಿ: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ