ನವದೆಹಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್ 13 ರಂದು ನಡೆಯಲಿದ್ದು, ಮಂಗಳವಾರ ಬಹಿರಂಗ ಪ್ರಚಾರ ಅಂತ್ಯವಾಯಿತು. 43 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನವಾಗಲಿದೆ. ಉಳಿದ 38 ಸ್ಥಾನಗಳಿಗೆ ನವೆಂಬರ್ 20 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ನಡುವೆ ರಾಜ್ಯದಲ್ಲಿ ಪೈಪೋಟಿ ನಡೆಯುತ್ತಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದ 24 ಜಿಲ್ಲೆಗಳಲ್ಲಿ ಇರುವ ಬುಡಕಟ್ಟು ಸಮುದಾಯದ ಮೇಲೆ ಕಣ್ಣಿಟ್ಟಿದೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರ‍್ಯಾಲಿಗಳನ್ನು ನಡೆಸಿ ಮತಯಾಚನೆ ಮಾಡಿದ್ದಾರೆ.
ಕಾಂಗ್ರೆಸ್ ಪರವಾಗಿ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಜೆಎಂಎಂನಿಂದ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಪತ್ನಿ, ಶಾಸಕಿ ಕಲ್ಪನಾ ಸೊರೆನ್ ಅವರು ಮುನ್ನಡೆಸಿದ್ದಾರೆ.
ಪಕ್ಷವಾರು ಸ್ಪರ್ಧೆ: ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಹೇಮಂತ್ ಸೊರೆನ್ ನೇತೃತ್ವದ ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಕಾಂಗ್ರೆಸ್ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಆರು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಎಡಪಕ್ಷಗಳು ಮೂರು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.
ಎರಡು ಹಂತದ ಮತದಾನದಲ್ಲಿ 2.6 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಇದರಲ್ಲಿ 1.31 ಕೋಟಿ ಪುರುಷ ಮತದಾರರು, 1.29 ಕೋಟಿ ಮಹಿಳಾ ಮತದಾರರು, 11.84 ಲಕ್ಷ ಪ್ರಥಮ ಬಾರಿ ಮತದಾರರು ಮತ್ತು 66.84 ಲಕ್ಷ ಯುವ ಮತದಾರರು ಸೇರಿದ್ದಾರೆ.
2019 ರ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) 30 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿ 25 ಸ್ಥಾನ, ಕಾಂಗ್ರೆಸ್ 16 ಸ್ಥಾನಗಳನ್ನು ಗೆದ್ದುಕೊಂಡಿತು. ಜಾರ್ಖಂಡ್ ವಿಕಾಸ್ ಮೋರ್ಚಾ (ಜೆವಿಎಂ) ಮೂರು ಸ್ಥಾನಗಳನ್ನು ಪಡೆದರೆ, ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟವು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಮತ್ತು ಆರ್‌ಜೆಡಿ ಬೆಂಬಲದೊಂದಿಗೆ ಜೆಎಂಎಂ ಸರ್ಕಾರ ರಚಿಸಿತು.
ಇದನ್ನೂ ಓದಿ: ನೀರಿನ ಹೆಡ್ ಟ್ಯಾಂಕರ್ ಹತ್ತಿ ಎಸ್ಐ ನೇಮಕಾತಿ ವಿರುದ್ಧ ಅಭ್ಯರ್ಥಿಗಳ ಪ್ರತಿಭಟನೆ