ನವದೆಹಲಿ: ಇಂದು ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ಕೇಂದ್ರ ಕಚೇರಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳನ್ನು ಪರಿಗಣಿಸಲಾಗಿದೆ ಎಂದು ತಿಳಿಸಿದರು. ನಂತರ ಜೆಡಿಎಸ್ ಸೀಟು ಹಂಚಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಂದಿನ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಮಾತ್ರ ಚರ್ಚೆ ಮಾಡಲಾಗಿದೆ. ಜೆಡಿಎಸ್ಗೆ ಎಷ್ಟು ಸೀಟು ಹಂಚಿಕೆ ಮಾಡಬೇಕು ಎಂಬುದರ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ತಿಳಿಸಿದರು.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬಿ.ಎಸ್.ಯಡಿಯೂರಪ್ಪ, ಕೆ.ಲಕ್ಷ್ಮಣ್ ಮತ್ತು ಇಕ್ಬಾಲ್ ಸಿಂಗ್ ಲಾಲ್ಪುರ ಸೇರಿದಂತೆ ಕೇಂದ್ರ ಚುನಾವಣಾ ಸಮಿತಿಯ ಇತರ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಕೇಂದ್ರ ಚುನಾವಣಾ ಸಮಿತಿ ರಾಜ್ಯವಾರು ನಾಯಕರನ್ನು ಕರೆಸಿ ವಿವಿಧ ರಾಜ್ಯಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸುತ್ತಿದೆ. ಮಹಾರಾಷ್ಟ್ರ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಅಭ್ಯರ್ಥಿಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಬಿಹಾರ, ಗುಜರಾತ್, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಕುರಿತು ಇನ್ನೂ ಚರ್ಚೆ ನಡೆಯಬೇಕಿದೆ ಎನ್ನಲಾಗಿದೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಪೌರತ್ವ ತಿದ್ದಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರ