ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2024ರಲ್ಲಿನ ಅಕ್ರಮಗಳ ಸಮಗ್ರ ತನಿಖೆಗಾಗಿ ಶಿಕ್ಷಣ ಸಚಿವಾಲಯ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿದೆ. ವೈದ್ಯಕೀಯ ಪ್ರವೇಶಾತಿ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಕೂಗು ಜೋರಾಗಿ ಕೇಳಿಬರುತ್ತಿದ್ದಂತೆ ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ.
ಪರೀಕ್ಷಾ ಸುಧಾರಣೆಗೆ ಇಸ್ರೋ ಮಾಜಿ ಅಧ್ಯಕ್ಷರ ನೇತೃತ್ವದಲ್ಲಿ ಸಮಿತಿ: ಇದರ ಜೊತೆಗೆ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಪರೀಕ್ಷಾ ಸುಧಾರಣೆಗಳಿಗಾಗಿ ಮಾಜಿ ಇಸ್ರೋ ಮುಖ್ಯಸ್ಥ ಕೆ.ರಾಧಾಕೃಷ್ಣನ್ ನೇತೃತ್ವದ ಏಳು ಸದಸ್ಯರ ಸಮಿತಿ ರಚಿಸಲಾಗಿದೆ.
ಮೇ 5ರಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ NEET -UG ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಪಾರದರ್ಶಕ ತನಿಖೆಗಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದೆ.
ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮ ತಡೆಗಟ್ಟಲು ಮತ್ತು ಪರೀಕ್ಷೆಗೆ ಸಂಬಂಧಿಸಿದ ವಿಷಯಗಳಿಗೆ ನಿಬಂಧನೆಗಳನ್ನು ರಚಿಸಲು ಕೇಂದ್ರವು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ, 2024 ಅನ್ನು ಕೂಡಾ ಜಾರಿಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಪರೀಕ್ಷೆಗಳ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರ ಬದ್ಧ ಎಂದು ತಿಳಿಸಿದೆ. ಆಕ್ರಮದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ/ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದೆ.