ಬುಂದಿ (ರಾಜಸ್ಥಾನ): ಹಿರಿಯ ವಿದ್ಯಾರ್ಥಿಯ ಕಿರುಕುಳದಿಂದ ಬೇಸತ್ತು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.
ಕೆಲ ದಿನಗಳಿಂದ ವಿದ್ಯಾರ್ಥಿನಿಯು ಕಿರುಕುಳಕ್ಕೆ ಒಳಗಾಗಿದ್ದಳು. ಇದರಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ವಿದ್ಯಾರ್ಥಿಯು 11ನೇ ತರಗತಿಯಲ್ಲಿ ಓದುತ್ತಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿರುವ ಪೊಲೀಸರು, ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಸಂತ್ರಸ್ತೆಯ ತಂದೆ ದೂರಿನ ಪ್ರಕಾರ, ಕೆಲವು ದಿನಗಳಿಂದ ತಮ್ಮ ಮಗಳಿಗೆ ವಿದ್ಯಾರ್ಥಿಯೊಬ್ಬ ಚುಡಾಯಿಸುತ್ತಿದ್ದ. ಇದರಿಂದ ಆಕೆ ಮಾನಸಿಕವಾಗಿ ಕುಗ್ಗಿದ್ದಳು. ಅಲ್ಲದೇ, ಮನೆಯಲ್ಲಿ ಹೆಚ್ಚು ಮಾತನಾಡುತ್ತಿರಲಿಲ್ಲ. ಬುಧವಾರವೂ ಶಾಲೆಯಿಂದ ಬರುವಾಗ ಆರೋಪಿ ಕಿರುಕುಳ ನೀಡಿದ್ದಾನೆ. ಈ ಘಟನೆಯ ಬಳಿಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ನಂತರ ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲೇ ವಿದ್ಯಾರ್ಥಿನಿಯು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಅಲ್ಲದೇ, ಈ ಘಟನೆಯ ಸಂಬಂಧ ಆರೋಪಿ ವಿದ್ಯಾರ್ಥಿ ಹಾಗೂ ಆತನ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತೆಯ ತಂದೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಡಿಎಸ್ಪಿ ಮಹಾವೀರ ಶರ್ಮಾ ಪ್ರತಿಕ್ರಿಯಿಸಿ, ಮೃತ ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆ, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಕಿರುಕುಳದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಆರೋಪಿ ವಿದ್ಯಾರ್ಥಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿದೆ. ಪ್ರಕರಣದ ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿಎಸ್ಪಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: 27 ವರ್ಷದ ನ್ಯಾಯಾಧೀಶೆ ಶವವಾಗಿ ಪತ್ತೆ