ರಾಜಸ್ಥಾನ: ಜೈಪುರ ಅಗ್ನಿ ಅವಘಡದಲ್ಲಿ 11 ಜನ ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ವ್ಯಕ್ತಪಡಿಸಿದ್ದಾರೆ.
ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಬೇಸರ ತರಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿರುವುದಾಗಿ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
"ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲೆಂದು ದೇವರಲ್ಲಿ ಪ್ರಾರ್ಥಿಸುವೆ. ಪ್ರತಿ ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ.ಗಳನ್ನು ಪರಿಹಾರ ನೀಡಲಾಗುವುದು" ಎಂದು ಅವರು ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ, ಜೈಪುರ-ಅಜ್ಮೀರ್ ಮಾರ್ಗದಲ್ಲಿ ಎಲ್‌ಪಿಜಿ ಮತ್ತು ಇತರ ವಾಹನಗಳನ್ನು ಸಾಗಿಸುತ್ತಿದ್ದ ಟ್ಯಾಂಕರ್‌ಗೆ ರಾಸಾಯನಿಕಗಳನ್ನು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು ಘಟನೆಯಲ್ಲಿ ಈವರೆಗೆ 11 ಜನ ಮೃತಪಟ್ಟ ವರದಿಯಾಗಿದೆ.
राजस्थान के जयपुर में हुआ सड़क हादसा अत्यंत दुःखद है। इस हादसे में अपना जीवन गँवाने वाले लोगों के परिजनों के प्रति गहरी संवेदनाएँ व्यक्त करता हूँ। इस संबंध में मुख्यमंत्री श्री @BhajanlalBjp जी से बात हुई। स्थानीय प्रशासन घायलों को तुरंत उपचार प्रदान करने का काम कर रहा है। घायलों…
— Amit Shah (@AmitShah) December 20, 2024
ಭಂಕ್ರೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಲಾಗಿದ್ದ ಸಿಎನ್‌ಜಿ ಗ್ಯಾಸ್ ಟ್ಯಾಂಕರ್‌ನಲ್ಲಿ ಭಾರಿ ಸ್ಫೋಟ ಮತ್ತು ಭಾರೀ ಬೆಂಕಿ ಸಂಭವಿಸಿದ ಪರಿಣಾಮ ಒಂದರ ಹಿಂದೆ ಒಂದರಂತೆ ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಹಲವರು ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 11ಕ್ಕೆ ತಲುಪಿದೆ. 35ಕ್ಕೂ ಹೆಚ್ಚು ಜನರು ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಾಗಿರುವುದಾಗಿ ಜಿಲ್ಲಾಡಳಿತ ದೃಢಪಡಿಸಿದೆ.
ಎಸ್‌ಎಂಎಸ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಸುಶೀಲ್ ಕುಮಾರ್ ಭಾಟಿ ಅವರು ಗಾಯಾಳುಗಳನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಹತ್ತರಿಂದ ಹನ್ನೆರಡು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರೆಲ್ಲರೂ ಶೇ.60ರಷ್ಟು ಸಟ್ಟಗಾಯಗಳಿಂದ ಬಳಲುತ್ತಿದ್ದಾರೆ. 35 ಜನರ ಪೈಕಿ 28 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದರೆ, ಆರು ಮಂದಿ ವೆಂಟಿಲೇಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಉಪಮುಖ್ಯಮಂತ್ರಿ ಪ್ರೇಮಚಂದ್ ಬೈರ್ವಾ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಅವರು, ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.