ನವದೆಹಲಿ: 18ನೇ ಲೋಕಸಭೆ ಚುನಾವಣೆಯ ಏಪ್ರಿಲ್ 19ರಂದು ನಡೆಯುವ ಮೊದಲ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಬುಧವಾರ ಅಧಿಸೂಚನೆ ಹೊರಡಿಸಿದೆ. ಮೊದಲ ಹಂತದ ಮತದಾನ ನಡೆಯುವ ರಾಜ್ಯಗಳಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.
ಬಿಹಾರ, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
ಇದರಲ್ಲಿ ಬಿಹಾರ ರಾಜ್ಯದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯಾಗಿದ್ದರೆ, ಉಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಮಾರ್ಚ್ 27 ಅಂತಿಮ ದಿನ. ಮಾರ್ಚ್ 30ರಂದು ಬಿಹಾರದಲ್ಲಿ ನಾಮಪತ್ರ ಪರಿಶೀಲನೆ ಕಾರ್ಯ ನಡೆದರೆ, ಉಳಿದ ರಾಜ್ಯಗಳಲ್ಲಿ ಮಾರ್ಚ್ 28ರಂದು ನಡೆಯಲಿದೆ. ನಾಮಪತ್ರ ವಾಪಸ್ಗೆ ಬಿಹಾರಕ್ಕೆ ಏಪ್ರಿಲ್ 2, ಉಳಿದ ರಾಜ್ಯಗಳಿಗೆ ಮಾರ್ಚ್ 30 ಕೊನೆ ದಿನವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
102 ಸ್ಥಾನಗಳಿಗೆ ಮೊದಲ ವೋಟಿಂಗ್: ಮೊದಲ ಹಂತದಲ್ಲಿ ನಡೆಯುವ ಚುನಾವಣೆಯಲ್ಲಿ ಒಟ್ಟು 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಇದರಲ್ಲಿ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8 ಮತ್ತು ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ 5, ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯದಲ್ಲಿ 2, ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯ 1 ಸ್ಥಾನಕ್ಕೆ ಏಪ್ರಿಲ್ 19 ರಂದು ಮತದಾನವಾಗಲಿದೆ.
ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 16ರಂದು 2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿತು. ಏಪ್ರಿಲ್ 19ರಿಂದ ಜೂನ್ 1ರವರೆಗೆ ದೇಶದಾದ್ಯಂತ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಮತಗಳ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ: ಏ.19ರಿಂದ 7 ಹಂತದಲ್ಲಿ ಮತದಾನ; ಜೂ.4ಕ್ಕೆ ಮತಎಣಿಕೆ