ಮುಂಬೈ: ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇನ್ನೆರಡು ವಾರಗಳು ಮಾತ್ರ ಬಾಕಿ ಇರುವ ಈ ಸಂದರ್ಭದಲ್ಲಿ ಡಿಜಿಪಿಯ ವರ್ಗಾವಣೆಯಾಗಿರುವುದು ಗಮನಾರ್ಹ.
ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ರಶ್ಮಿ ಶುಕ್ಲಾ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಕಡೆಗೆ ಪಕ್ಷಪಾತ ಧೋರಣೆ ಹೊಂದಿದ್ದಾರೆ ಮತ್ತು ಅವರು ಉನ್ನತ ಹುದ್ದೆಯಲ್ಲಿದ್ದರೆ ನ್ಯಾಯಯುತ ಚುನಾವಣೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಆರೋಪಿಸಿದ್ದವು.
ಶುಕ್ಲಾ ಅವರ ಬಳಿಯಿರುವ ಉಸ್ತುವಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಹಿರಿಯ ಐಪಿಎಸ್ ಅಧಿಕಾರಿಗೆ ಹಸ್ತಾಂತರಿಸುವಂತೆ ಚುನಾವಣಾ ಆಯೋಗವು ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರಿಗೆ ಸೂಚಿಸಿದೆ. ಅಲ್ಲದೆ ಮುಂದಿನ ರಾಜ್ಯ ಪೊಲೀಸ್ ಮುಖ್ಯಸ್ಥರ ಆಯ್ಕೆಗಾಗಿ ಸಮಿತಿಯೊಂದನ್ನು ರಚಿಸಲು ನಾಳೆಯೊಳಗೆ ಮೂರು ಜನರ ಹೆಸರುಗಳನ್ನು ಕಳುಹಿಸುವಂತೆ ಕೂಡ ಆಯೋಗವು ಸೌನಿಕ್ ಅವರಿಗೆ ಕೇಳಿದೆ.
ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಸೇರಿದಂತೆ ವಿರೋಧ ಪಕ್ಷಗಳು ಶುಕ್ಲಾ ಅವರು ಪಕ್ಷಪಾತಿಯಾಗಿದ್ದಾರೆ ಎಂದು ಆರೋಪಿಸಿದ್ದವು.
"ರಾಜ್ಯ ಪೊಲೀಸ್ ಮಹಾನಿರ್ದೇಶಕಿ ರಶ್ಮಿ ಶುಕ್ಲಾ ವಿರುದ್ಧ ಗಂಭೀರ ಆರೋಪವಿದೆ. 2019ರಲ್ಲಿ ನಮ್ಮ ಸರ್ಕಾರ ರಚನೆಯಾದಾಗ, ಭಾರತೀಯ ಜನತಾ ಪಕ್ಷಕ್ಕಾಗಿ ನೇರವಾಗಿ ಕೆಲಸ ಮಾಡುತ್ತಿದ್ದ ಈ ಪೊಲೀಸ್ ಮಹಾನಿರ್ದೇಶಕರು ನಮ್ಮ ಎಲ್ಲಾ ಫೋನ್ಗಳನ್ನು ಟ್ಯಾಪ್ ಮಾಡುತ್ತಿದ್ದರು ಮತ್ತು ನಾವು ಏನು ಮಾಡಲಿದ್ದೇವೆ ಎಂಬುದರ ಬಗ್ಗೆ ದೇವೇಂದ್ರ ಫಡ್ನವೀಸ್ ಅವರಿಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತಿದ್ದರು " ಎಂದು ರಾಜ್ಯಸಭಾ ಸಂಸದ ಮತ್ತು ಶಿವಸೇನೆ (ಯುಬಿಟಿ) ಮುಖಂಡ ಸಂಜಯ್ ರಾವತ್ ಮಾಧ್ಯಮಗಳ ಮುಂದೆ ಹೇಳಿದ್ದರು.
"ಅವರು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುತ್ತಾರೆ ಎಂದು ನಾವು ನಿರೀಕ್ಷಿಸುವುದಾದರೂ ಹೇಗೆ? ಚುನಾವಣೆಯ ಅಧಿಕಾರವನ್ನು ಅವರಿಗೆ ನೀಡಬಾರದು ಎಂದು ನಾವು ಹೇಳಿದ್ದೆವು. ಆದರೆ ನಮಗೆ ವರ್ಗಾವಣೆಯ ಅಧಿಕಾರವಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ ಜಾರ್ಖಂಡ್ನ ಡಿಜಿಪಿಯನ್ನು ಬದಲಾಯಿಸಲಾಗಿದೆ. ಇದು ಹೇಗೆ ಸಾಧ್ಯ? ಮಹಾರಾಷ್ಟ್ರದ ಚುನಾವಣೆಯನ್ನು ಪೊಲೀಸ್ ಬಲದ ಮೇಲೆ ನಡೆಸಲಾಗುತ್ತಿದೆ" ಎಂದು ಅವರು ಹೇಳಿದ್ದರು.
ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಶುಕ್ಲಾ ಅವರನ್ನು ರಾಜ್ಯ ಪೊಲೀಸ್ ಮುಖ್ಯಸ್ಥ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿದ್ದರು.
1988ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಶುಕ್ಲಾ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಪೊಲೀಸ್ ಮುಖ್ಯಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಅವರು ಸಶಸ್ತ್ರ ಸೀಮಾ ಬಲದ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 20ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: 'ಯಾವುದೇ ಪಕ್ಷ, ಅಭ್ಯರ್ಥಿಯನ್ನು ಬೆಂಬಲಿಸಲ್ಲ': ಮರಾಠಾ ಕೋಟಾ ಹೋರಾಟಗಾರ ಜಾರಂಗೆ ಪಾಟೀಲ್