ಕುಪ್ವಾರ (ಜಮ್ಮು ಮತ್ತು ಕಾಶ್ಮೀರ): ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗುರುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಕೆರಾನ್ ಸೆಕ್ಟರ್‌ನ ಎಲ್‌ಒಸಿ ಬಳಿ ಎನ್‌ಕೌಂಟರ್ ಪ್ರಾರಂಭವಾಗಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ. ಇತರ ಭಯೋತ್ಪಾದಕರನ್ನು ಮಟ್ಟ ಹಾಕಲು ಜಂಟಿ ಶೋಧಾ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯೆ, ಗುರುವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸೈನಿಕರು ಗಾಯಗೊಂಡ ಕೆಲವೇ ಗಂಟೆಗಳ ನಂತರ ಕುಪ್ವಾರದಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಕಸ್ತಿಗಢ ಪ್ರದೇಶದ ಜದ್ದನ್ ಬಾಟಾ ಗ್ರಾಮದಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಭಯೋತ್ಪಾದಕರು, ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣವೇ ಭದ್ರತಾ ಪಡೆ ಪ್ರತಿದಾಳಿ ನಡೆಸಿದೆ. ಈ ಮೂಲಕ ಎನ್‌ಕೌಂಟರ್ ಪ್ರಾರಂಭಗೊಂಡು, ಇಬ್ಬರು ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.