ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯವು ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರ ಕೈಗೆತ್ತಿಕೊಳ್ಳಲಿದೆ. ನನ್ನ ಬಂಧನವು ಕಾನೂನು ಬಾಹಿರವಾಗಿದ್ದು, ತಕ್ಷಣ ಬಿಡುಗಡೆ ಮಾಡುವಂತೆ ಕೇಜ್ರಿವಾಲ್ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.
ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಶುಕ್ರವಾರ ದೆಹಲಿಯ ವಿಚಾರಣಾ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ. ಇದೇ ವೇಳೆ, ತಮ್ಮ ಬಂಧನವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಹೋಳಿ ಹಬ್ಬದ ಹಿನ್ನೆಲೆಯಲ್ಲಿ ರಜೆಯಿದ್ದ ಕಾರಣ ಹೈಕೋರ್ಟ್ ತುರ್ತು ವಿಚಾರಣೆಯ ಮನವಿಯನ್ನು ತಿರಸ್ಕರಿಸಿತ್ತು. ಇದೀಗ ಮಾರ್ಚ್ 27ರಂದು ಬೆಳಗ್ಗೆ 10.30ಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರ ಪೀಠದ ಮುಂದೆ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯು ವಿಚಾರಣೆಗೆ ಬರಲಿದೆ.
ದೆಹಲಿ ಸರ್ಕಾರ ಈಗಾಗಲೇ ರದ್ದುಗೊಳಿಸಿರುವ 2021-22ರ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಜಾರಿಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಸಂಬಂಧ ಕೇಂದ್ರದ ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ ತನಿಖೆ ನಡೆಸುತ್ತಿವೆ. ಅಬಕಾರಿ ನೀತಿಯನ್ನು ರೂಪಿಸಲು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು. ಇದರಿಂದಾಗಿ ಆರೋಪಿಗಳಿಗೆ ಅನಪೇಕ್ಷಿತ ಲಾಭಗಳು ಉಂಟಾಗಿದೆ. ಇದಕ್ಕಾಗಿ ಆಮ್ ಆದ್ಮಿ ಪಕ್ಷಕ್ಕೆ ಕಿಕ್‌ಬ್ಯಾಕ್ ಪಾವತಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.
ಈ ಸಂಬಂಧ ವಿಚಾರಣೆ ನಡೆಸಲು ಕೇಜ್ರಿವಾಲ್ ಅವರಿಗೆ ಇಡಿ ಹಲವು ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಅಲ್ಲದೇ, ಕೇಜ್ರಿವಾಲ್ ವಿರುದ್ಧ ಬಲವಂತದ ಕ್ರಮದಿಂದ ರಕ್ಷಣೆ ಪಡೆಯಲು ಕಾನೂನು ಹೋರಾಟ ನಡೆಸುತ್ತಿದ್ದರು. ಮಾರ್ಚ್ 21ರಂದು ಕೇಜ್ರಿವಾಲ್ ಅವರಿಗೆ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಇದಾದ ಕೇವಲ ಗಂಟೆಗಳಲ್ಲೇ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರ ಅಧಿಕೃತ ನಿವಾಸಕ್ಕೆ ತೆರಳಿ ಬಂಧಿಸಿದ್ದರು.
ಇದೇ ಪ್ರಕಣದಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಸಹ ಬಂಧನಕ್ಕೆ ಒಳಗಾಗಿದ್ದಾರೆ. ಅಲ್ಲದೇ, ತೆಲಂಗಾಣದ ಬಿಆರ್ಎಸ್ ಪಕ್ಷದ ನಾಯಕಿ, ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಅವರನ್ನೂ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಇದನ್ನೂ ಓದಿ: ಬಿಆರ್ಎಸ್ ನಾಯಕಿ ಕವಿತಾಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ ಶಿಫ್ಟ್