ಪಾಟ್ನಾ(ಬಿಹಾರ): ಬಿಹಾರ ರಾಜಧಾನಿ ಪಾಟ್ನಾದ ಹೋಟೆಲ್‌ವೊಂದರಲ್ಲಿ ಗುರುವಾರ ಭೀಕರ ಬೆಂಕಿ ದುರಂತ ಘಟಿಸಿದೆ. ಘಟನೆಯಲ್ಲಿ ಆರು ಜನರು ಮೃತಪಟ್ಟಿದ್ದಾರೆ. ಇನ್ನೂ ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅನೇಕರನ್ನು ರಕ್ಷಿಸಲಾಗಿದೆ.
ಇಲ್ಲಿನ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಬೆಳಗ್ಗೆ 11 ಗಂಟೆಯ ಸುಮಾರಿಗೆ ಘಟನೆ ನಡೆಯಿತು. ಗ್ಯಾಸ್ ಸಿಲಿಂಡರ್‌ಗೆ ಬೆಂಕಿ ಹೊತ್ತಿಕೊಂಡಿರುವುದೇ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ತನಿಖೆ ನಡೆಯುತ್ತಿದೆ. ಇದುವರೆಗೆ ಸುಮಾರು 45 ಜನರನ್ನು ರಕ್ಷಿಸಲಾಗಿದೆ. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿ ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಸ್ವಲ್ಪ ಸಮಯದಲ್ಲೇ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಹೋಟೆಲ್ ಅಕ್ಕಪಕ್ಕದ ಕಟ್ಟಡಗಳಲ್ಲಿದ್ದ ಜನರನ್ನು ತೆರವು ಮಾಡಲಾಗಿತ್ತು. ತಕ್ಷಣವೇ ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಪ್ರಯತ್ನಿಸಿದರು. ಆದರೆ, ಬಿಸಿಲು ಮತ್ತು ಗಾಳಿಯಿಂದಾಗಿ ಅಗ್ನಿಶಾಮಕ ತಂಡ ಸಾಕಷ್ಟು ಹರಸಾಹಸ ಮಾಡಬೇಕಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದ ಡಿಐಜಿ ಮೃತ್ಯುಂಜಯ್ ಕುಮಾರ್ ಚೌಧರಿ, ಸೆಂಟ್ರಲ್ ಪಾಟ್ನಾ ಸಿಟಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಪ್ರಕಾಶ್, ಹಿರಿಯ ಪೊಲೀಸ್ ಅಧೀಕ್ಷಕ ರಾಜೀವ್ ಮಿಶ್ರಾ ಸೇರಿದಂತೆ ಅನೇಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಮಾನವರಹಿತ ಬೇಹುಗಾರಿಕೆ ವಿಮಾನ ಪತನ: ತನಿಖೆಗೆ ಆದೇಶ