ಮಹೌ (ಮಧ್ಯಪ್ರದೇಶ): ಇಲ್ಲಿನ ಮಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಕರ್ನಾಟಕ ಮೂಲದ ಮಹಿಳೆಯರು ಎಂದು ವರದಿಯಾಗಿದೆ.
ತಡರಾತ್ರಿ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಮಾನ್ಪುರದ ಭೈರವ ಘಾಟ್ನಲ್ಲಿ ಟೆಂಪೋ ಟ್ರಾವೆಲರ್ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಟೆಂಪೋ ಟ್ರಾವೆಲರ್‌ನಲ್ಲಿದ್ದ ಪ್ರಯಾಣಿಕರು ಕರ್ನಾಟಕದ ನಿವಾಸಿಗಳು ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, ಘಟನೆಯಲ್ಲಿ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ಸಂದರ್ಭದಲ್ಲಿ, ಆ ಮಾರ್ಗವಾಗಿ ಹೋಗುತ್ತಿದ್ದ ಬೈಕ್ಗೂ ಕೂಡ ಡಿಕ್ಕಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶ ಮೂಲದ ಇಬ್ಬರು ಸವಾರರು ಸಹ ಮೃತರಾಗಿದ್ದಾರೆ. ಅಲ್ಲದೇ, ಟೆಂಪೋ ಟ್ರಾವೆಲರ್‌ನಲ್ಲಿದ್ದ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟ ಕರ್ನಾಟಕ ಮೂಲದ ಇಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನೆ ಮಾಹಿತಿ ತಿಳಿದು ಮಾನ್ಪುರ ಠಾಣೆ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದ ರಭಸಕ್ಕೆ ವಾಹನಗಳು ನಜ್ಜುಗುಜ್ಜಾಗಿದ್ದು, ಕೆಲ ಮೃತದೇಹಗಳೂ ಕೂಡ ಛಿದ್ರಗೊಂಡಿದ್ದವು. ವಾಹನದಲ್ಲಿದ್ದ ವಸ್ತುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಗಾಯಾಳುಗಳು ಇಂದೋರ್‌ನ ಎಂವೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನ್ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ದುರ್ಘಟನೆ ಬಗ್ಗೆ ಮಾಹಿತಿ ನೀಡಿದ ಮಾನ್ಪುರ ಪೊಲೀಸ್ ಠಾಣೆ ಎಎಸ್ಐ ರವಿ, "ಟ್ರಾವೆಲರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸುವ ಮೊದಲು, ಬೈಕ್ಗೂ ಕೂಡ ಟ್ರಾವೆಲರ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿದ್ದ ಮಧ್ಯಪ್ರದೇಶದ ಸೆಂಧ್ವಾ ನಿವಾಸಿ ಶುಭಂ ಮತ್ತು ಧರ್ಮಪುರಿ ನಿವಾಸಿ ಹಿಮಾಂಶು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮೃತರಾಗಿದ್ದಾರೆ. ಅವರ ಗುರುತು ಪತ್ತೆ ಮಾಡಲು ಪ್ರಯತ್ನಿಸಲಾಗುತ್ತಿದೆ'' ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬಸ್-ಕಾರು ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ 7 ಮಂದಿ ಸಾವು