ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 24ಗಂಟೆಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದೆ. ಈ ಭಾಗದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್, ಉಡುಪಿ ಮತ್ತು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುಂದುವರಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
"ಕರಾವಳಿ ಕರ್ನಾಟಕ ಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ಚದುರಿದ ಮತ್ತು ಭಾರೀ ಮಳೆ ಬೀಳಲಿದೆ. ಗಾಳಿಯ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಜೊತೆ ಗಾಳಿಯ ವೇಗವು ಗಂಟೆಗೆ 45 ರಿಂದ 55 ಕಿ.ಮೀ ಇರಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿ ಸಂಭವಿಸುವ ಸಾಧ್ಯತೆಯಿದೆ" ಎಂದು ಹೇಳಿದೆ.
'ನೈಋತ್ಯ ಮುಂಗಾರು ಕರಾವಳಿಯಲ್ಲಿ ಜೋರಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ' ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್. ಪುವಿಯರಸನ್ ಹೇಳಿದ್ದಾರೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿಯಲ್ಲಿ 45 ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಇದರಿಂದ ಭಾರೀ ಅಲೆಗಳು ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಲ್ಲೂ ಮಳೆ: ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣದಿಂದ ಕೂಡಿರುವ ಸಿಲಿಕಾನ್ ಸಿಟಿಯಲ್ಲಿ ಮುಂದಿನ 24 ಗಂಟೆಗಳ ಕಾಲ ಇದೇ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಜೊತೆ ನಿರಂತರ ಗಾಳಿ ಇರಲಿದೆ. ಇಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ.
ಮುಲ್ಕಿಯಲ್ಲಿ ಅತಿ ಹೆಚ್ಚು ಮಳೆ: ದಕ್ಷಿಣ ಕನ್ನಡದಲ್ಲಿ ಕಳೆದೊಂದು ದಿನದಿಂದ ಸುರಿಯುತ್ತಿರುವ ಮಳೆಗೆ ಈಗಾಗಲೇ ನದಿ- ಕೆರೆ, ಕಟ್ಟೆಗಳಲ್ಲಿ ನೀರಿನ ಹರಿವು ಹೆಚ್ಚಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಅತಿ ಹೆಚ್ಚು ಅಂದರೆ 30 ಸೆಂ.ಮೀ. ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮತ್ತು ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ತಲಾ 21 ಸೆಂ.ಮೀ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಮಳೆಯಾದ ಪರಿಣಾಮ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಿದೆ.
ಇದನ್ನೂ ಓದಿ: ಮೀನುಗಾರರಿಗೆ ಎಚ್ಚರಿಕೆ; ಉಡುಪಿಯಲ್ಲಿ 77.8 ಮಿ.ಮೀ. ಭಾರಿ ಮಳೆ, ಮೆಸ್ಕಾಂಗೆ 17.8ಲಕ್ಷ ರೂ. ನಷ್ಟ