ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ಕಿತ್ತು ಹಾಕಿದ 5 ಮತ್ತು ಒಟ್ಟು 10 ವರ್ಷಗಳ ಬಳಿಕ ಚುನಾವಣೆ ಘೋಷಣೆಯಾಗಿದ್ದನ್ನು ಬಿಜೆಪಿ ಸ್ವಾಗತಿಸಿದೆ. ಈ ಚುನಾವಣೆಯು ಪ್ರಜಾಪ್ರಭುತ್ವದ ಬೇರುಗಳನ್ನು ಮತ್ತಷ್ಟು ಗಟ್ಟಿ ಮಾಡಲಿದೆ ಎಂದು ಹೇಳಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹರಿಯಾಣದ ಜೊತೆಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಸಂತಸ ತಂದಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಈ ಚುನಾವಣೆಯು ಪ್ರಜಾಪ್ರಭುತ್ವದ ಬೇರುಗಳನ್ನು ಮತ್ತಷ್ಟು ಬಲಪಡಿಸುತ್ತದೆ. ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಲಿದೆ ಎಂದು ಪ್ರತಿಪಾದಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಹರಿಯಾಣದಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಜನರು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಶಾಂತಿ ಮತ್ತು ಅಭಿವೃದ್ಧಿಯನ್ನು ಬಯಸುವ ಮತ್ತು ಯುವಜನರಿಗೆ ಉಜ್ವಲ ಭವಿಷ್ಯವನ್ನು ಖಾತ್ರಿಪಡಿಸುವ ಸರ್ಕಾರವನ್ನು ರಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಎಂದು ಕೇಂದ್ರ ಗೃಹ ಸಚಿವ ಮನವಿ ಮಾಡಿದ್ದಾರೆ.
ಜನಹಿತ ಸರ್ಕಾರ ಆರಿಸಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿ, ಸೌಹಾರ್ದತೆ, ಭದ್ರತೆ ಮತ್ತು ಅಭಿವೃದ್ಧಿಯ ಹೊಸ ಮಾನದಂಡಗಳನ್ನು ಸೃಷ್ಟಿಸಿದೆ. ಪ್ರಗತಿ ಮತ್ತು ಜನಹಿತ ಕಾಪಾಡುವ ಸರ್ಕಾರವನ್ನು ಜನರು ಆರಿಸಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ. ನಡ್ಡಾ ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಂಗ್ರೆಸ್‌ಗೆ ಅಭಿವೃದ್ಧಿಯ ಅಜೆಂಡಾವಿಲ್ಲ. ಜಮ್ಮು -ಕಾಶ್ಮೀರ ಮತ್ತು ಹರಿಯಾಣದ ಜನರಿಗೆ ಇದು ತುಂಬಾ ಚೆನ್ನಾಗಿ ತಿಳಿದಿದೆ. ಹೀಗಾಗಿ ಎರಡೂ ಕಡೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು ಒಂದು ದಶಕದ ನಂತರ ಸೆಪ್ಟೆಂಬರ್ 18ರಿಂದ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2019ರಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶದಲ್ಲಿ ಜನರು ಸರ್ಕಾರವನ್ನು ಆಯ್ಕೆ ಮಾಡಲಿದ್ದಾರೆ. ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.