ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಸೋಮವಾರ ಸಂಜೆ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಈ ಯೋಧರು ಗಾಯಗೊಂಡಿದ್ದರು.
ಇಲ್ಲಿನ ದೇಸಾ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ ಸಿಬ್ಬಂದಿ ಮತ್ತು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಶೋಧ ಕಾರ್ಯಾಚರಣೆ ವೇಳೆ ರಾತ್ರಿ ಭಯೋತ್ಪಾದಕರೊಂದಿಗೆ ಎನ್‌ಕೌಂಟರ್ ಶುರುವಾಗಿದೆ. ಆರಂಭದಲ್ಲಿ 20 ನಿಮಿಷಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಅಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.
ತಕ್ಷಣವೇ ಎಲ್ಲ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಇದರಲ್ಲಿ ನಾಲ್ವರು ಯೋಧರು ಕೊನೆಯುಸಿರೆಳೆದಿದ್ದಾರೆ. ಒಬ್ಬ ಯೋಧ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಸೇನಾ ಅಧಿಕಾರಿಗಳು ಸ್ಥಳದಲ್ಲೇ ಇದ್ದು, ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ರಷ್ಯಾ ಯೋಧರು ಬಳಸುತ್ತಿರುವ ಸೇನಾ ಶೂ 'ಮೇಡ್ ಇನ್ ಬಿಹಾರ್'!