ನವದೆಹಲಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸುಪ್ರೀಂ ಕೋರ್ಟ್ ಸೂಚಿಸಿದೆ. ರಾಷ್ಟ್ರೀಯ ಕಾರ್ಯಪಡೆ ರಚನೆಗೆ ಆದೇಶ ನೀಡಿರುವ ಪೀಠ, ಮೂರು ವಾರಗಳಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ ನೇತೃತ್ವದ ಪೀಠ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿ, ಆಗಸ್ಟ್ 22ರೊಳಗೆ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಕೇಳಿದೆ. ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಯನ್ನು ಸದಸ್ಯರನ್ನಾಗಿ ಒಳಗೊಂಡಿರುವ ರಾಷ್ಟ್ರೀಯ ಕಾರ್ಯಪಡೆಯನ್ನು ಸುಪ್ರೀಂ ಕೋರ್ಟ್ ಘೋಷಿಸಿದೆ. ಮೂರು ವಾರಗಳಲ್ಲಿ ಮಧ್ಯಂತರ ವರದಿಯನ್ನು ಮತ್ತು ಎರಡು ತಿಂಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಕಾರ್ಯ ನಿಧಿಗೆ ಹೇಳಿದೆ.
ತಳಮಟ್ಟದಲ್ಲಿ ವಿಷಯಗಳು ಬದಲಾಗಲು ಇನ್ನೊಂದು ಅತ್ಯಾಚಾರ ಪ್ರಕರಣ ಸಂಭವಿಸುವಲ್ಲಿವೆರೆಗೆ ದೇಶ ಕಾಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೀಕರ ಎಂದು ಬಣ್ಣಿಸಿರುವ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡುತ್ತಿರುವ ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಆಸ್ಪತ್ರೆಯ ಅಧಿಕಾರಿಗಳು ಏನು ಮಾಡುತ್ತಿದ್ದರು? ಎಂದು ಪೀಠ ಪ್ರಶ್ನಿಸಿತು.
ಪಶ್ಚಿಮ ಬಂಗಾಳ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತದೆ ಮತ್ತು ಅಪರಾಧದ ಸ್ಥಳವನ್ನು ರಕ್ಷಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಯಾಕೆ ಅಪರಾಧ ಸ್ಥಳವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂಬುದನ್ನೇ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಒಳಗೆ ಸಾವಿರಾರು ಜನರ ಗುಂಪು ಹೇಗೆ ನುಗ್ಗಿತು? ಎಂದು ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು.