ನವದೆಹಲಿ: ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಆಸ್ತಿ ಸೇರಿದಂತೆ ವಿವಿಧ ಮಾಹಿತಿಗಳನ್ನು ಮತದಾರರು ತಿಳಿದುಕೊಳ್ಳಬಹುದು. ಇದಕ್ಕಾಗಿ ಭಾರತೀಯ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. 'Know Your Candidate' (KYC) ಹೆಸರಿನ ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ.
''ಚುನಾವಣಾ ಕಾವಲು ಸಮಿತಿಯು 'Know Your Candidate' (KYC) ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆಗೊಳಿಸಿದೆ. ಇದು ಮತದಾರರು ತಮ್ಮ ಕ್ಷೇತ್ರದ ಯಾವುದೇ ಅಭ್ಯರ್ಥಿ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆಯೇ ಎಂಬುದನ್ನು ತಿಳಿದುಕೊಳ್ಳಲು ಅನುವು ಮಾಡಿಕೊಡುತ್ತದೆ. ಆ್ಯಂಡ್ರಾಯ್ಡ್ ಮತ್ತು ಐಒಎಸ್ ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿ ಡೌನ್‌ಲೋಡ್ ಮಾಡಲು ಈ ಅಪ್ಲಿಕೇಶನ್ ಲಭ್ಯ" ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಈಗಾಗಲೇ ಘೋಷಣೆ ಮಾಡಿದೆ. ಇದೇ ವೇಳೆ ಆಂಧ್ರಪ್ರದೇಶ, ಒಡಿಶಾ, ಅರುಣಾಚಲ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳೂ ಸಹ ಪ್ರತ್ಯೇಕವಾಗಿ ಒಂದೇ ಹಂತಗಳಲ್ಲಿ ನಡೆಯಲಿವೆ.
"ಕ್ರಿಮಿನಲ್ ಪೂರ್ವಪರ ಹೊಂದಿರುವ ಅಭ್ಯರ್ಥಿಗಳು ಹೊಂದಿರುವ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಮತದಾರರು ಈಗ ಸ್ವತಃ ಪರಿಶೀಲಿಸಬಹುದು. ಈ ಸಂಬಂಧ ಎಲ್ಲಾ ಸಂಬಂಧಿತ ಮಾಹಿತಿಯನ್ನು ಈ ಅಪ್ಲಿಕೇಶನ್‌ನಲ್ಲಿ ಲಭ್ಯಗೊಳಿಸಲಾಗುತ್ತದೆ. ಅಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪಕ್ಷಗಳು ಈ ನಿರ್ಧಾರದ ಹಿಂದಿನ ತಾರ್ಕಿಕತೆಯನ್ನು ವಿವರಿಸಬೇಕಾಗುತ್ತದೆ'' ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದರು.
"ಕ್ರಿಮಿನಲ್ ದಾಖಲೆ ಹೊಂದಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಮೂರು ಬಾರಿ ದೂರದರ್ಶನ, ಪತ್ರಿಕೆಗಳಲ್ಲಿ ಪ್ರಕಟಿಸಬೇಕು ಅಥವಾ ಸಾರ್ವಜನಿಕಗೊಳಿಸಬೇಕು. ಅಂತಹ ಕಳಂಕಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಪಕ್ಷಗಳು ಅವರು ಇತರ, ಹೆಚ್ಚು ಅರ್ಹರು, ಹಕ್ಕುದಾರರಿಗಿಂತ ಅವರನ್ನೇಕೆ ಆಯ್ಕೆ ಮಾಡಿದ್ದಾರೆ ಎಂಬುದನ್ನು ವಿವರಿಸಬೇಕು. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಅಭ್ಯರ್ಥಿಯ ಆಯ್ಕೆಯ ಆಧಾರವನ್ನೂ ಸ್ಪಷ್ಟವಾಗಿ ತಿಳಿಸಬೇಕು" ಎಂದು ಹೇಳಿದರು.
'Know Your Candidate' (KYC) ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಸ್ಟೋರ್ ಎರಡರಲ್ಲೂ ಲಭ್ಯವಿದೆ. ಈ ಕುರಿತು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ್ದು, ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ಕ್ಯೂಆರ್ ಕೋಡ್ ಸಹ ಹಂಚಿಕೊಳ್ಳಲಾಗಿದೆ. ಆಂಧ್ರಪ್ರದೇಶದಲ್ಲಿ ಮೇ 13ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಏಪ್ರಿಲ್ 19ರಂದು ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಯೊಂದಿಗೆ 26 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ಕೂಡ ನಿಗದಿಯಾಗಿದೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ 2024: ಗರ್ಭಿಣಿಯರು, ವಿಶೇಷ ಚೇತನರಿಗಾಗಿ ಮತಗಟ್ಟೆಗಳಲ್ಲಿ ಇರಲಿದೆ ವಿಶೇಷ ವ್ಯವಸ್ಥೆ