ನವದೆಹಲಿ: ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತು ದೇಶದಿಂದ ಪರಾರಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಲು ಕರ್ನಾಟಕ ಸರ್ಕಾರ ಮಾಡಿರುವ ಮನವಿಯನ್ನು ವಿದೇಶಾಂಗ ಇಲಾಖೆ (ಎಂಇಎ) ಪರಿಗಣಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಗುರುವಾರ ತಿಳಿಸಿದೆ.
ಸಂಸದರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರದಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬಂದಿದೆ. ಇದನ್ನು ಶೀಘ್ರವೇ ಪರಿಗಣನೆಗೆ ತೆಗೆದುಕೊಂಡು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ವಿದೇಶಾಂಗ ಇಲಾಖೆ ಅಧಿಕಾರಿಗಳು ತಿಳಿಸಿದ್ದಾಗಿ ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಜೆಡಿಎಸ್ನಿಂದ ಅಮಾನತಾದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದ್ದರೂ, ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ ಬೆನ್ನಲ್ಲೇ ವಿದೇಶಾಂಗ ಇಲಾಖೆಯಿಂದ ಈ ಮಾಹಿತಿ ಹೊರಬಿದ್ದಿದೆ.
ಕೋರ್ಟ್ನಿಂದ ಬಂಧನ ವಾರಂಟ್: ಲೈಂಗಿಕ ಕಿರುಕುಳ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ಯು ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ವಿರುದ್ಧ ಶನಿವಾರ ಬಂಧನ ವಾರಂಟ್ ಹೊರಡಿಸಿದೆ. ಬಳಿಕ ರಾಜ್ಯ ಸರ್ಕಾರ ಪಾಸ್‌ಪೋರ್ಟ್ ರದ್ದು ಮಾಡಲು ಕೋರಿ ವಿದೇಶಾಂಗ ಇಲಾಖೆ ಪತ್ರ ಬರೆದಿತ್ತು.
ಇದಕ್ಕೂ ಮೊದಲು ಸಂಸದರು ರಾಜತಾಂತ್ರಿಕ ಪಾಸ್ಪೋರ್ಟ್ನ ಮೇಲೆ ವಿದೇಶ ಪ್ರಯಾಣಕ್ಕೆ ಯಾವುದೇ ಅನುಮತಿ ಪಡೆದಿಲ್ಲ. ಸರ್ಕಾರವೂ ಇದಕ್ಕೆ ಅನುಮತಿ ನೀಡಿಲ್ಲ ಎಂದು ವಿದೇಶಾಂಗ ಇಲಾಖೆ ಈ ತಿಂಗಳ ಆರಂಭದಲ್ಲಿ ಸ್ಪಷ್ಟನೆ ನೀಡಿತ್ತು. ಸಂಸದರಿಗೆ ಮಾನ್ಯವಾಗಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಬಳಸಿಕೊಂಡು ಜರ್ಮನಿಗೆ ತೆರಳಲು ಅವರು ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿಲ್ಲ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಅವರು ಸ್ಪಷ್ಟನೆ ನೀಡಿದ್ದರು.
ಪ್ರಧಾನಿಗೆ 2ನೇ ಸಲ ಸಿಎಂ ಪತ್ರ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಪತ್ರ ಬರೆದಿದ್ದಾರೆ.
ಈಗಾಗಲೇ ಒಮ್ಮೆ ಪತ್ರದ ಬರೆದು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದುಪಡಿಸಲು ಮನವಿ ಮಾಡಿದ್ದ ಸಿಎಂ, ಇದೀಗ ಎರಡನೇ ಪತ್ರ ಬರೆದಿದ್ದಾರೆ. ಪ್ರಜ್ವಲ್ ರೇವಣ್ಣ ಹೊಂದಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿ, ತಲೆಮರೆಸಿಕೊಂಡಿರುವ ಅವರನ್ನು ಭಾರತಕ್ಕೆ ವಾಪಸ್ ಕರೆತರಲು ತ್ವರಿತ ಕ್ರಮ ವಹಿಸಬೇಕೆಂದು ಮನವಿ ಮಾಡಿದ್ದಾರೆ.