ನವದೆಹಲಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತವು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನಡೆಸುತ್ತಿರುವ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸುವ ಅಧಿಕಾರ ತನಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಪರಮೇಶ್ವರ, "ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಿರುವುದರಿಂದ ಇಡೀ ತನಿಖಾ ಪ್ರಕ್ರಿಯೆಯನ್ನೇ ಸ್ಥಗಿತಗೊಳಿಸುವ ಪ್ರಯತ್ನಗಳು ನಡೆದಂತಿವೆ" ಎಂದು ವಾದಿಸಿದರು. "ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತವು ಮುಕ್ತಾಯ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ" ಎಂದು ಅವರು ಒತ್ತಿ ಹೇಳಿದರು.
"ಒಂದು ವಿಚಾರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಲು ಮತ್ತು ಇನ್ನೊಂದನ್ನು ಮುಂದುವರಿಸಲು ಅನುಮತಿಸಲಾಗದಷ್ಟು ನಾವು ಶಕ್ತಿಹೀನರಾಗಿದ್ದೇವೆಯೇ" ಎಂದು ಈ ವೇಳೆ ನ್ಯಾಯಪೀಠ ಪ್ರಶ್ನಿಸಿತು. ಇದೇ ವೇಳೆ, ಈ ವಾದವನ್ನು ಒಪ್ಪಿಕೊಳ್ಳುವ ಅಗತ್ಯವಿಲ್ಲ ಎಂದೂ ನ್ಯಾಯಪೀಠ ಹೇಳಿತು.
ಕರ್ನಾಟಕ ಸರ್ಕಾರವನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಈ ವಿಷಯದಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸಮಯ ಕೋರಿದ್ದಾರೆ.
ಸಿಬಿಐ ವಕೀಲ ಪರ ವಕೀಲ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಕರಣ ಮತ್ತೊಂದು ನ್ಯಾಯಾಲಯದಲ್ಲಿ ಇರುವುದರಿಂದ ಪಾಸ್ ಓವರ್ ಕೋರಿದರು. ಇದಕ್ಕೆ ಕೋರ್ಟ್, ವಿಶೇಷವಲ್ಲದ ದಿನಗಳಂದು ವಿಚಾರಣೆ ನಡೆಸುವುದಾಗಿ ಹೇಳಿತು.
ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಂದಿನ ವಿಚಾರಣೆಯನ್ನು ಕೋರ್ಟ್ 2025ರ ಜನವರಿ 22ಕ್ಕೆ ನಿಗದಿಪಡಿಸಿದೆ.
ಆಗಸ್ಟ್ 29, 2024ರಂದು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸಿಬಿಐ ಮತ್ತು ಯತ್ನಾಳ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನವೆಂಬರ್ 2023ರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಸ್ತುತ ಕರ್ನಾಟಕ ಸಚಿವ ಸಂಪುಟವು ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ (ಡಿಎ)ಆರೋಪ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಒಪ್ಪಿಗೆ ನೀಡುವ ಹಿಂದಿನ ಬಿಜೆಪಿ ಸರ್ಕಾರದ ಕ್ರಮವು ಕಾನೂನಿಗೆ ಅನುಗುಣವಾಗಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಮತ್ತು ಸಿಬಿಐಗೆ ನೀಡಲಾದ ತನಿಖಾ ಅನುಮತಿಯನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿತು.
ಕಾಂಗ್ರೆಸ್ ಸರ್ಕಾರದ ಸಿಬಿಐ ತನಿಖೆ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ಕರ್ನಾಟಕ ಹೈಕೋರ್ಟ್ ಆಗಸ್ಟ್ನಲ್ಲಿ ಅಭಿಪ್ರಾಯಪಟ್ಟಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಯತ್ನಾಳ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ: 2024ರಲ್ಲಿ ಭಾರತದಲ್ಲಿ ನಡೆದ ಪ್ರಮುಖ ಘಟನಾವಳಿಗಳ ಒಂದು ಇಣುಕು ನೋಟ - MAJOR EVENTS 2024