ನವದೆಹಲಿ: 2024ರ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿ, ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿಯಾಗಿ ಮುಂದುವರೆಯಲು ಸೂಚಿಸಿದ್ದಾರೆ.
17ನೇ ಲೋಕಸಭೆ ಅವಧಿಯು ಜೂನ್ 16ರಂದು ಪೂರ್ಣಗೊಳ್ಳಲಿದೆ. ಇಂದು ಬೆಳಗ್ಗೆ ಕೇಂದ್ರ ಸಚಿವ ಸಂಪುಟವು ಲೋಕಸಭೆ ವಿಸರ್ಜನೆಗೆ ಶಿಫಾರಸ್ಸು ಮಾಡಿದೆ. ಬಳಿಕ ಪ್ರಧಾನಿ ಮೋದಿ ಹಾಗೂ ಸಂಪುಟದ ಸಚಿವರು ರಾಷ್ಟ್ರಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ರಾಷ್ಟ್ರಪತಿ ಭವನವು ಮಾಹಿತಿ ನೀಡಿದೆ.
''ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿಗಳನ್ನು ಭೇಟಿಯಾಗಿ ತಮ್ಮ ಹಾಗೂ ಸಂಪುಟ ಸಹೋದ್ಯೋಗಿಗಳ ರಾಜೀನಾಮೆ ಸಲ್ಲಿಕೆ ಮಾಡಿದರು. ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ನೂತನ ಸರ್ಕಾರ ರಚಿಸುವವರೆಗೂ ನರೇಂದ್ರ ಮೋದಿ ಹಾಗೂ ಅವರ ಸಂಪುಟವನ್ನು ಮುಂದುವರೆಯಲು ತಿಳಿಸಿದರು'' ಎಂದು ರಾಷ್ಟ್ರಪತಿ ಭವನ ಹೇಳಿದೆ.
ಮಂಗಳವಾರ ಪ್ರಕಟವಾದ 543 ಕ್ಷೇತ್ರಗಳ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಸರಳ ಬಹುಮತವನ್ನು ಪಡೆದಿದೆ. ಬಿಜೆಪಿಯು ಏಕಾಂಗಿಯಾಗಿ 240 ಸ್ಥಾನಗಳನ್ನು ಗಳಿಸುವ ಮೂಲಕ ಅದರ ಮೈತ್ರಿಕೂಟವು ಮ್ಯಾಜಿಕ್ ನಂಬರ್ 272ಅನ್ನು ದಾಟುವಲ್ಲಿ ಯಶಸ್ವಿಯಾಗಿದೆ.
ಜೂನ್ 8ರಂದು ಪ್ರಮಾಣವಚನ ಸ್ವೀಕಾರ?: ನರೇಂದ್ರ ಮೋದಿ ಪ್ರಧಾನಿಯಾಗಿ ಸತತ ಎರಡನೇ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಜೂನ್ 8ರಂದು ಮತ್ತೊಂದು ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಮಂತ್ರಿ ನಿವಾಸದಲ್ಲಿ ಸಂಪುಟ ಸಹೋದ್ಯೋಗಿಗಳ ಸಭೆ ನಡೆಸಿ, ಈ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಇಂದು ಎನ್ಡಿಎ - ಇಂಡಿಯಾ ಒಕ್ಕೂಟಗಳ ಸಭೆ: ಒಂದೇ ವಿಮಾನದಲ್ಲಿ ಪ್ರಯಾಣಿಸಿದ ನಿತೀಶ್ ಕುಮಾರ್ - ತೇಜಸ್ವಿ ಯಾದವ್!!