ಅಮೃತಸರ (ಪಂಜಾಬ್): ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ದೆಹಲಿ, ಪಂಜಾಬ್‌ನಲ್ಲಿ ಅಧಿಕಾರಕ್ಕೇರಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದ ಬೆನ್ನಲ್ಲೇ, ಪಂಜಾಬ್‌ನಲ್ಲಿ ಪಕ್ಷಕ್ಕೆ ಭಾರಿ ಮುಜುಗರ ಉಂಟಾಗಿದೆ.
ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಆಪ್ ಪಕ್ಷದ ರಾಜ್ಯದ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ. ಜೊತೆಗೆ ಶಾಸಕ ಶೀತನ್ ಅಂಗುರಾಲ್ ಅವರು ಕೂಡ ಬಿಜೆಪಿ ಬಾವುಟ ಹಿಡಿದಿದ್ದಾರೆ. ಇದು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವಾಗಲೇ ಈ ವಿದ್ಯಮಾನ ನಡೆದಿರುವುದು ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.
ಪಂಜಾಬ್‌ನ ಜಲಂಧರ್‌ನ ಸಂಸದ ರಿಂಕು ಮತ್ತು ಜಲಂಧರ್ ಪಶ್ಚಿಮದ ಶಾಸಕ ಅಂಗುರಲ್ ಅವರು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಅದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷ ಬದಲು: ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಆಪ್ ಸಂಸದ ರಿಂಕು, ಪಂಜಾಬ್‌ನಲ್ಲಿ ಎಎಪಿ ಸರ್ಕಾರವು ಅಭಿವೃದ್ಧಿ ಯೋಜನೆಗಳಲ್ಲಿ ತನಗೆ ಸಹಾಯ ಮಾಡುತ್ತಿಲ್ಲ ಎಂದು ಆರೋಪಿಸಿ, ರಾಜ್ಯ ಒಳಿತಿಗಾಗಿ ಬಿಜೆಪಿಗೆ ಸೇರಿದ್ದೇನೆ ಎಂದು ತಿಳಿಸಿದರು. ಆಪ್ ನನ್ನನ್ನು ಬೆಂಬಲಿಸದ ಕಾರಣ ಜಲಂಧರ್ ಜನರಿಗೆ ನಾನು ನೀಡಿದ ಭರವಸೆಗಳನ್ನು ಈಡೇರಿಸಲಾಗಿಲ್ಲ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಶೈಲಿಯಿಂದ ನಾನು ಪ್ರಭಾವಿತನಾಗಿದ್ದೇನೆ. ಜಲಂಧರ್ ಅಭಿವೃದ್ಧಿಗಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತಿವೆ. ಹೀಗಾಗಿ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ಜಲಂಧರ್‌ಗೆ ತರುತ್ತೇನೆ ಎಂದು ಅವರು ಹೇಳಿದರು.
ಸಂಸದ ಸುಶೀಲ್ ಕುಮಾರ್ ರಿಂಕು ಅವರು ಕಳೆದ ವರ್ಷ ಜಲಂಧರ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಆಪ್ ಸೇರಿದ್ದರು. ಚುನಾವಣೆಯಲ್ಲಿ ಆಪ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಲೋಕಸಭೆಯಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಅಶಿಸ್ತಿನ ಕಾರಣಕ್ಕಾಗಿ ಅವರನ್ನು ಸದನದಿಂದ ಅಮಾನತು ಮಾಡಲಾಗಿತ್ತು. ಇದೀಗ ಆಪ್ಗೆ ಕೈಕೊಟ್ಟು ಬಿಜೆಪಿ ಸೇರಿದ್ದಾರೆ. ಬಿಜೆಪಿಯಿಂದ ಅವರು ಲೋಕಸಭೆ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಇದನ್ನೂ ಓದಸಿ: ಕೇಜ್ರಿವಾಲ್ ಸಿಎಂ ಆಗಿ ಮುಂದುವರೆಯಬಹುದೇ?; ಜೈಲಿನಿಂದ ಆಡಳಿತ ಕಾರ್ಯಸಾಧ್ಯವೇ?; ತಜ್ಞರ ಅಭಿಪ್ರಾಯ ಹೀಗಿದೆ - Kejriwal Arrest