ಅನುಪ್‌ಗರ್: ಕಾರು ಮತ್ತು ಎರಡು ಬೈಕ್ಗಳ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಪರಿಣಾಮ ಆರು ಮಂದಿ ಯುವಕರು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಅನುಪಗರ್ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಮತ್ತು ಬೈಕ್ಗಳು ಸಂಪೂರ್ಣವಾಗಿ ಜಖಂ ಆಗಿವೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬುಧವಾರ ತಡರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಭಜನಾ ಹಾಡು ಕೇಳಿದ ನಂತರ ಆರು ಜನ ಯುವಕರು ಎರಡು ಬೈಕ್‌ಗಳಲ್ಲಿ ತಮ್ಮ ಗ್ರಾಮ ಬಖ್ತಾವರಪುರಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಪುಲ್ಲಿ 25ರ ಬಳಿ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆರು ಜನ ಯುವಕರು ಸಾವನ್ನಪ್ಪಿದ್ದಾರೆ ಎಂದು ಶ್ರೀವಿಜಯನಗರ ಎಸ್‌ಎಚ್‌ಒ ಗೋವಿಂದ್ ಬಿಷ್ಣೋಯ್ ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಯುವಕರನ್ನು ಆಂಬ್ಯುಲೆನ್ಸ್ ಸಹಾಯದಿಂದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಂಗಾನಗರದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟರು ಎಂದು ವೈದ್ಯರು ಘೋಷಿಸಿದ್ದಾರೆ.
ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಯುವಕರೆಲ್ಲರೂ ಮದ್ಯದಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಮೈಸೂರು: ಕರ್ಕಶ ಶಬ್ಧ ಮಾಡುವ ಸೈಲೆನ್ಸರ್ಗಳ ಮೇಲೆ ರೋಲರ್ ಹತ್ತಿಸಿದ ಪೊಲೀಸರು - ROLLER ON SILENCERS