ದಿಂಡೋರಿ (ಮಧ್ಯಪ್ರದೇಶ): ಮಧ್ಯಪ್ರದೇಶದ ದಿಂಡೋರಿಯಲ್ಲಿ ನಿಯಂತ್ರಣ ಕಳೆದುಕೊಂಡು ಪಿಕಪ್ ವಾಹನ ಪಲ್ಟಿಯಾಗಿ 14 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗುರುವಾರ ನಸುಕಿನ ವೇಳೆ ದುರ್ಘಟನೆ ಸಂಭವಿಸಿದೆ.
ಪೊಲೀಸರ ಪ್ರಕಾರ, ಸೀಮಂತ ಕಾರ್ಯ ಮುಗಿಸಿಕೊಂಡು ಬರುವಾಗ ಬಿಚಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಬಡ್ಜರ್ ಘಾಟ್‌ನಲ್ಲಿ ಅಪಘಾತ ನಡೆದಿದೆ. 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಾವನ್ನಪ್ಪಿದವರಲ್ಲಿ 6 ಪುರುಷರು ಮತ್ತು 8 ಮಹಿಳೆಯರು ಸೇರಿದ್ದಾರೆ. ಮೃತರಲ್ಲಿ ಹೆಚ್ಚಿನವರು ಅಮೈ ಮೂಲದವರು ಎಂದು ತಿಳಿದುಬಂದಿದೆ. ಅಲ್ಲದೆ, ಮೃತರು ಮತ್ತು ಗಾಯಗೊಂಡ ಹಲವರು ಪೋಡಿ, ಧರಾಮಣಿ ಹಾಗೂ ಸಜ್ನಿಯಾ ನಿವಾಸಿಗಳು ಎಂದು ಹೇಳಲಾಗಿದೆ.
ಗಾಯಾಳುಗಳನ್ನು ಶಹಾಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ಮಾರ್ಕಮ್, 'ಜನರು ಮಂಡ್ಲಾ ಚೌಕ್ಗೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಇದ್ದಕ್ಕಿದ್ದಂತೆ ಪಿಕಪ್ ವಾಹನವು ನಿಯಂತ್ರಣ ತಪ್ಪಿ, 20 ಅಡಿ ಆಳಕ್ಕೆ ಗದ್ದೆಯಲ್ಲಿ ಬಿದ್ದಿದೆ'' ಎಂದು ತಿಳಿಸಿದ್ದಾರೆ.
ಪರಿಹಾರ ಘೋಷಿಸಿದ ಸಿಎಂ : ದಿಂಡೋರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದದ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಅವರು ಪರಿಹಾರ ಘೋಷಣೆ ಮಾಡಿದ್ದಾರೆ. ''ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಹಾಗೂ ಕುಟುಂಬದ ಸದಸ್ಯರಿಗೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ'' ಎಂದು ಎಕ್ಸ್ನಲ್ಲಿ ಸಿಎಂ ಪೋಸ್ಟ್ ಮಾಡಿದ್ದಾರೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸೂಚನೆ ಮೇರೆಗೆ ಕ್ಯಾಬಿನೆಟ್ ಸಚಿವ ಸಂಪತಿಯಾ ಉಯಿಕೆ ಅವರು ದಿಂಡೋರಿಗೆ ಭೇಟಿ ನೀಡುತ್ತಿದ್ದಾರೆ.
ಇದನ್ನೂ ಓದಿ: ಬೀದರ್: ಟ್ರಕ್ - ಪಿಕ್ ಅಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು