ನವದೆಹಲಿ: ಕೋಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಸ್ವೀಕರಿಸಿದ್ದು, ಆಗಸ್ಟ್ 20ರಂದು ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ಕೈಗೆತ್ತಿಗೊಳ್ಳಲಿದೆ.
ಆಗಸ್ಟ್ 9ರಂದು 31 ವರ್ಷದ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ನಡೆದಿತ್ತು. ನಂತರ ದೇಶಾದ್ಯಂತ ವೈದ್ಯರು ನ್ಯಾಯಕ್ಕಾಗಿ ಮುಷ್ಕರ ಕೈಗೊಂಡಿದ್ದಾರೆ. ಪ್ರಸ್ತುತ ಸಿಬಿಐ ಸಮಗ್ರ ತನಿಖೆ ನಡೆಸುತ್ತಿದೆ.
ಪ್ರಕರಣದ ವಿವರ: ಆಗಸ್ಟ್ 9ರಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ವೈದ್ಯೆಯ ಶವ ಪತ್ತೆಯಾಗಿತ್ತು. 10 ಗಂಟೆಗೆ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಮೃತದೇಹದ ಮೇಲೆ ಹಲವು ಗಾಯದ ಗುರುತುಗಳಿದ್ದವು. ಆರಂಭದಲ್ಲಿ ಆಸ್ಪತ್ರೆಯ ಅಧಿಕಾರಿಗಳು ಆತ್ಮಹತ್ಯೆ ಎಂದು ಹೇಳಿದ್ದರು. ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿತ್ತು.
ಕೂಡಲೇ ಕೋಲ್ಕತ್ತಾ ಪೊಲೀಸರು ಪ್ರಕರಣದ ತನಿಖೆ ಪ್ರಾರಂಭಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿ ಮತ್ತು ಒಡೆದ ಹೆಡ್‌ಫೋನ್‌ಗಳ ಸಹಾಯದಿಂದ ಆರೋಪಿ ಸಂಜಯ್ ರೈ ಎಂಬಾತನನ್ನು ಬಂಧಿಸಿದ್ದರು. ಆತ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ನಂತರ ಪ್ರಕರಣ ಕೊಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. ತ್ವರಿತ ವಿಚಾರಣೆ ನಡೆಸಿದ ಕೋರ್ಟ್, ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದೆ.
ಸಿಬಿಐ ಇದುವರೆಗೆ ಸುಮಾರು 20 ಜನರನ್ನು ವಿಚಾರಣೆಗೊಳಪಡಿಸಿದೆ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ವಿಚಾರಣೆ ಸತತ ಮೂರನೇ ದಿನವೂ ಮುಂದುವರೆದಿದೆ.
ಸಿಬಿಐ ತಂಡವು ಆರ್‌ಜಿ ಕರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದೊಳಗೆ ಮತ್ತು ಹೊರಗೆ 3ಡಿ ಲೇಸರ್ ಮ್ಯಾಪಿಂಗ್ ಮೂಲಕ ತನಿಖೆ ನಡೆಸುತ್ತಿದೆ.
ಇನ್ನೊಂದೆಡೆ, ಮೃತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಕೋಲ್ಕತ್ತಾ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಸಾರ್ವಜನಿಕರೂ ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ: ಖಾಸಗಿ ಬಸ್-ಪಿಕಪ್ ನಡುವೆ ಭೀಕರ ಅಪಘಾತ: 10 ಮಂದಿ ದುರ್ಮರಣ - Horrific Accident