ನವದೆಹಲಿ/ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಆರೋಪಗಳು ಗಂಭೀರವಾಗಿವೆ. ಆದರೆ ಎರಡು-ಮೂರು ಅಂಶಗಳಿವೆ ಮತ್ತು ದೂರಿನಲ್ಲಿ ಯಾವುದೇ ಸೆಕ್ಷನ್ 376 ವಿಷಯದ ಬಗ್ಗೆ ಮಾತನಾಡುವುದಿಲ್ಲ..” ಎಂದು ಹೇಳಿದರು. ರೋಹಟಗಿ ಅವರು ತಮ್ಮ ಕಕ್ಷಿದಾರರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು, ಈ ವಿಷಯದಿಂದ ಅವರು ಸೋತರು ಎಂದು ಹೇಳಿದರು. "ನೀವು ತುಂಬಾ ಪ್ರಭಾವಿಗಳು...", ಎಂದು ನ್ಯಾಯಮೂರ್ತಿ ತ್ರಿವೇದಿ ಹೇಳಿದರು. ಈ ಸಂಬಂಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ರೋಹಟಗಿ ತಿಳಿಸಿದರು. “ನಾನು ವಿದೇಶದಲ್ಲಿದ್ದೆ. ಮತ್ತೆ ಬಂದು ಶರಣಾದೆ. ಇದೀಗ ಆರೋಪಪಟ್ಟಿ ಸಲ್ಲಿಕೆಯಾಗಿದೆ. ನಾನು ಈ ಹಿಂದೆ ಸಂಸದನಾಗಿದ್ದೆ. ಸಂಸದ ಸ್ಥಾನಕ್ಕೆ ಸ್ಪರ್ಧಿಸಿದ್ದೆ. ಇದೆಲ್ಲದರಿಂದ ನಾನು ಸೋತಿದ್ದೇನೆ”, ಎಂದು ಪ್ರಜ್ವಲ್ ಅವರು ತಮ್ಮ ಪರ ವಕೀಲ ರೋಹಟಗಿ ಮೂಲಕ ಕೋರ್ಟ್ಗೆ ವಿವರಿಸಿದರು. ಆದರೆ, ಅರ್ಜಿಯನ್ನು ಪುರಸ್ಕರಿಸಲು ಉತ್ಸುಕವಾಗಿಲ್ಲ. ಅರ್ಜಿ "ವಜಾಗೊಳಿಸಲಾಗಿದೆ" ಎಂದು ನ್ಯಾಯಮೂರ್ತಿ ತ್ರಿವೇದಿ ಹೇಳಿದರು.
ಈ ಮೊದಲು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್, ಮೇಲ್ನೋಟಕ್ಕೆ ಅರ್ಜಿದಾರರ ಕೃತ್ಯಗಳು ಇಂದ್ರಿಯಗಳ ಮೇಲೆ ನಿಯಂತ್ರಣ ಕಳೆದುಕೊಂಡಿರುವುದು ಮತ್ತು ಸ್ವಾಸ್ಥ್ಯ ಸಮಾಜದಲ್ಲಿ ಬೆದರಿಕೆ ಒಡ್ಡುವುದನ್ನು ಚಿತ್ರಿಸುತ್ತಿದೆ. ಹಾಗಾಗಿ, ಜಾಮೀನು ಪಡೆಯಲು ಪ್ರಜ್ವಲ್ ರೇವಣ್ಣ ಅರ್ಹರಾಗಿಲ್ಲ ಎಂದು ಕಟುವಾಗಿ ಹೇಳಿತ್ತು.
ಅಲ್ಲದೆ, ಮೂರು ಪ್ರತ್ಯೇಕ ಅರ್ಜಿಗಳ ಸಂಬಂಧ ದೂರುದಾರರು ದಾಖಲಿಸಿರುವ ಎಫ್‌ಐಆರ್‌ನ ಪ್ರತಿ, ಅದರಲ್ಲಿ ದೂರುದಾರೆ/ಸಂತ್ರಸ್ತೆಯರು ನೀಡಿರುವ ಹೇಳಿಕೆಗಳು ಮತ್ತು ಲೈಂಗಿಕ ದೌರ್ಜನ್ಯದ ವಿಡಿಯೋದಲ್ಲಿ ಪ್ರಜ್ವಲ್ ರೇವಣ್ಣ ನಡೆಸಿರುವ ಸಂಭಾಷಣೆ ಕುರಿತ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ತಿಳಿಸಿರುವ ಅಂಶಗಳನ್ನು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಹೈಕೋರ್ಟ್‌ನ ಈ ಆದೇಶದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣ ಹಿನ್ನೆಲೆ: ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮನೆಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದರು. ಈ ಪ್ರಕರಣದಲ್ಲಿ ಪ್ರಜ್ವಲ್ ಎರಡನೇ ಆರೋಪಿಯಾಗಿದ್ದಾರೆ. ಮೊದಲನೇ ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣಗೆ ಈಗಾಗಲೇ ಜಾಮೀನು ಮಂಜೂರಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಗನ್ನಿಕಡ ತೋಟದ ಮನೆಯಲ್ಲಿದ್ದ ಕೆಲಸದಾಕೆಯ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಪುತ್ರನಿಗೆ ಪ್ರತಿಷ್ಠಿತ ಶಾಲೆಯಲ್ಲಿ ಪ್ರವೇಶ ಕಲ್ಪಿಸುವ ನೆಪದಲ್ಲಿ ಹಾಸನದ ಮಹಿಳೆಯ ನಗ್ನ ಚಿತ್ರ/ವಿಡಿಯೋ ಸೆರೆಹಿಡಿದ ಆರೋಪಕ್ಕೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಪ್ರಜ್ವಲ್ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಈ ಎರಡೂ ಪ್ರಕರಣಗಳು ಬೆಂಗಳೂರಿನ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದವು.
ಇದನ್ನೂ ಓದಿ: ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಹೈಕೋರ್ಟ್