ನವದೆಹಲಿ: ಬಿಜೆಪಿ ಕಾರ್ಯಕರ್ತ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆ ಉಂಟಾಗಿದೆ. ಪ್ರಕರಣದ ಆರೋಪ ಪಟ್ಟಿಯನ್ನು ಕೈಬಿಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತು. ಇದರಿಂದ ಕಾಂಗ್ರೆಸ್ ಹಾಲಿ ಶಾಸಕನ ವಿರುದ್ಧ ದೋಷಾರೋಪ ಹೊರಿಸಬಹುದಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ವಿರುದ್ಧ ಆರೋಪ ನಿಗದಿಪಡಿಸುವ ವಿಚಾರಣಾ ನ್ಯಾಯಾಲಯದ ತೀರ್ಪಿಗೂ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದಂತಾಗಿದೆ. ಜೊತೆಗೆ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಎತ್ತಿಹಿಡಿದಿದೆ.
2016ರಲ್ಲಿ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು. ಇದರ ವಿರುದ್ಧ ಕಾಂಗ್ರೆಸ್ ನಾಯಕ ಹೈಕೋರ್ಟ್ ಮೊರೆ ಹೋಗಿ ತಮ್ಮ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಅವಕಾಶ ನೀಡಬಾರದು ಎಂದು ಕೋರಿದ್ದರು. ಆದರೆ, ಇದನ್ನು ನಿರಾಕರಿಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು.
ಹೈಕೋರ್ಟ್ನಲ್ಲಿ ಹಿನ್ನಡೆಯಾದ ಬಳಿಕ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆರೋಪಪಟ್ಟಿ ಸಲ್ಲಿಕೆಗೆ ಅವಕಾಶ ನೀಡಿರುವ ತೀರ್ಪನ್ನು ರದ್ದು ಮಾಡಬೇಕು ಎಂದು ಕೋರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ವಿ.ಸಂಜಯ್ ಕುಮಾರ್ ಮತ್ತು ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿತು.
'ನ್ಯಾಯಾಲಯ ಜೂಜಾಟದ ಕೇಂದ್ರವಾಗಿ ಮಾರ್ಪಟ್ಟಿದೆಯೇ?': ಜೊತೆಗೆ, ಪ್ರಕರಣವನ್ನು ಮುಚ್ಚಿಹಾಕಲು ವಿನಯ್ ಕುಲಕರ್ಣಿ ಅವರು ಮೃತ ವ್ಯಕ್ತಿಯ ವಿಧವಾ ಪತ್ನಿಯನ್ನು 'ಖರೀದಿ' ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದಿತು. ಕುಲಕರ್ಣಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ ದವೆ ಅವರು, ಅರ್ಜಿಯನ್ನು ಪುರಸ್ಕರಿಸಬೇಕು ಎಂದು ಪೀಠವನ್ನು ಒತ್ತಾಯಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ಸಂಜಯ್ಕುಮಾರ್, ‘ಈ ನ್ಯಾಯಾಲಯ ಜೂಜಾಟದ ಕೇಂದ್ರವಾಗಿ ಮಾರ್ಪಟ್ಟಿದೆಯೇ’ ಎಂದು ಖಡಕ್ ಆಗಿ ಉತ್ತರಿಸಿದರು.
ಯೋಗೀಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಪೊಲೀಸರು ಆರಂಭದಲ್ಲಿ ಆರು ಮಂದಿಯನ್ನು ಬಂಧಿಸಿದ್ದರು. 2019ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ತನಿಖೆ ಆರಂಭಿಸಿದ ಕೇಂದ್ರೀಯ ತನಿಖಾ ದಳ 2020ರಲ್ಲಿ ಕುಲಕರ್ಣಿಯನ್ನು ಬಂಧಿಸಿತು. ಬಳಿಕ ಅವರ ವಿರುದ್ಧ ಆರೋಪಪಟ್ಟಿಯನ್ನು ಸಲ್ಲಿಸಿತು. ವಿಚಾರಣಾ ನ್ಯಾಯಾಲಯವು ಇದನ್ನು 2023 ರಲ್ಲಿ ಒಪ್ಪಿಕೊಂಡಿತ್ತು. ತಮ್ಮ ವಿರುದ್ಧದ ಆರೋಪಗಳನ್ನು ಪ್ರಶ್ನಿಸಿ ಕುಲಕರ್ಣಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಯಾವುದೇ ಫಲ ನೀಡಿಲ್ಲ.
ಇದನ್ನೂ ಓದಿ: ವಿನಯ್ ಕುಲಕರ್ಣಿ ವಿರುದ್ಧದ ದೋಷಾರೋಪಣೆ ಕೈಬಿಡಲು ಹೈಕೋರ್ಟ್ ನಿರಾಕರಣೆ - Vinay Kulkarni